ಬೀದರ್: ಸರ್ಕಾರಿ ಉದ್ಯೋಗ ನೇಮಕಾತಿಗೆ ಅಗತ್ಯವಿರುವ ಜಾತಿ, ಆದಾಯ ಹಾಗೂ 371(ಜೆ) ಸೇರಿದಂತೆ ವಿವಿಧ ಮೀಸಲಾತಿ ಪ್ರಮಾಣ ಪತ್ರಗಳನ್ನು ಶೀಘ್ರವಾಗಿ ಮಂಜೂರು ಮಾಡಬೇಕು ಹಾಗೂ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಹೊಯ್ಸಳ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.

ಭಾಲ್ಕಿ ತಹಶೀಲ್ದಾರ್ ಅವರಿಗೆ ಮಂಗಳವಾರ ಸಲ್ಲಿಸಿದ ಮನವಿಯಲ್ಲಿ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಉದ್ಯೋಗ ನೇಮಕಾತಿಗೆ ಅರ್ಜಿ ಸಲ್ಲಿಸಲು ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ಜಾತಿ, 371(ಜೆ), ಆದಾಯ, ನಿವಾಸಿ ಹಾಗೂ ಒಬಿಸಿ ಪ್ರಮಾಣ ಪತ್ರಗಳು ನಾಡ ಕಚೇರಿ ಮತ್ತು ಸಂಬಂಧಪಟ್ಟ ಕಚೇರಿಗಳಲ್ಲಿ ಸಮಯಕ್ಕೆ ಸರಿಯಾಗಿ ದೊರೆಯದೆ ವಿಳಂಬವಾಗುತ್ತಿವೆ ಎಂದು ಆರೋಪಿಸಲಾಗಿದೆ.

ಇದರಿಂದಾಗಿ ಅನೇಕ ಅರ್ಹ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗದ ಅವಕಾಶದಿಂದ ವಂಚಿತರಾಗುವ ಭೀತಿ ಎದುರಾಗಿದೆ ಎಂದು ವೇದಿಕೆ ಆತಂಕ ವ್ಯಕ್ತಪಡಿಸಿದೆ. ವಿಶೇಷವಾಗಿ ಎಸ್ಸಿ-ಎ, ಎಸ್ಸಿ-ಬಿ, ಎಸ್ಟಿ, ಕೋಲಿ, ಎಸ್ಟಿ ಗೊಂಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಸಾಮಾನ್ಯ ವರ್ಗ ಸೇರಿದಂತೆ ವಿವಿಧ ಸಮುದಾಯಗಳ ಅಭ್ಯರ್ಥಿಗಳಿಗೆ ಅಗತ್ಯ ದಾಖಲೆಗಳನ್ನು ವಿಳಂಬವಿಲ್ಲದೆ ವಿತರಿಸಬೇಕು ಎಂದು ಒತ್ತಾಯಿಸಲಾಗಿದೆ.

ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಜಾತಿ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳನ್ನು ಶೀಘ್ರವಾಗಿ ಮಂಜೂರು ಮಾಡಬೇಕು. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅಗತ್ಯವಿರುವ 371(ಜೆ) ಪ್ರಮಾಣ ಪತ್ರವನ್ನು ತ್ವರಿತವಾಗಿ ನೀಡಬೇಕು. ನಾಡ ಕಚೇರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಮಾಣ ಪತ್ರಗಳ ಮಂಜೂರಾತಿಯಲ್ಲಿ ವಿಳಂಬವಾಗದಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಆಗ್ರಹಿಸಲಾಗಿದೆ.

ಪ್ರಮಾಣ ಪತ್ರಗಳ ವಿಳಂಬದಿಂದಾಗಿ ಅರ್ಜಿ ಸಲ್ಲಿಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಉದ್ಯೋಗ ನೇಮಕಾತಿಯ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಸರ್ಕಾರ ಹಾಗೂ ನೇಮಕಾತಿ ಪ್ರಾಧಿಕಾರಕ್ಕೆ ಶಿಫಾರಸು ಮಾಡಬೇಕು ಎಂದು ವೇದಿಕೆ ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಕರ್ನಾಟಕ ಹೊಯ್ಸಳ ವೇದಿಕೆಯ ಜಿಲ್ಲಾಧ್ಯಕ್ಷ ಸಂತೋಷ್ ನಾಟೇಕರ್, ಕಲ್ಯಾಣ ಕರ್ನಾಟಕ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಮೋರೆ, ಜಿಲ್ಲಾ ಉಪಾಧ್ಯಕ್ಷ ಸಿದ್ದು ಜಮಾದಾರ್, ಭಾಲ್ಕಿ ತಾಲೂಕು ಅಧ್ಯಕ್ಷ ತುಕಾರಾಂ ಕಾಸಲೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧಾರ್ಥ್ ಪ್ಯಾಗೆ, ಗ್ರಾಮೀಣ ಯುವ ಘಟಕದ ಅಧ್ಯಕ್ಷ ಅಶೋಕ್ ಸಾನೆ ಹಾಗೂ ರಾಹುಲ್ ಪ್ರಿನ್ಸ್ ಸೇರಿದಂತೆ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor