Bidar | ಅನಿಲಕುಮಾರ್ ಬೆಲ್ದಾರ್‌ಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ
ಬೀದರ್: ದಲಿತ ಸಮುದಾಯದ ಮುಖಂಡ ಅನಿಲಕುಮಾರ್ ಬೆಲ್ದಾರ್ ಅವರನ್ನು ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಲ್ದಾರ್ ಅವರು ಎಲ್ಲ ಜಾತಿ ಹಾಗೂ ಸಮುದಾಯಗಳ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಎಲ್ಲರನ್ನು ಒಟ್ಟಾಗಿ ಮುನ್ನಡೆಸುವ ನಾಯಕತ್ವ ಗುಣ ಹೊಂದಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅವರು ಎಲ್ಲ ರೀತಿಯಿಂದಲೂ ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಹುಮನಾಬಾದ್ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಡಾಕುಳಗಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಬಾಬುರಾವ್ ಪಾಸ್ವಾನ್, ಸಂವಿಧಾನ ಸಂರಕ್ಷಣಾ ಸಮಿತಿಯ ಸಂಚಾಲಕ ಬಸವರಾಜ್ ಮಾಳಗೆ, ಒಬಿಸಿ ಆರ್ಮಿ ಜಿಲ್ಲಾಧ್ಯಕ್ಷ ತಾನಾಜಿ ಸಗರ್, ಹರಳಯ್ಯ ಸಮಾಜದ ಜಿಲ್ಲಾಧ್ಯಕ್ಷ ರಾಜಕುಮಾರ್ ಟಿಳ್ಳೆಕರ್, ದಲಿತ ಸೇನೆಯ ಜಿಲ್ಲಾಧ್ಯಕ್ಷ ಶ್ರೀಪತರಾವ್ ದೀನೆ, ಕಾಂಗ್ರೆಸ್ ಎಸ್ಸಿ ವಿಭಾಗದ ಜಿಲ್ಲಾ ಸಂಯೋಜಕ ವಿನೋದಕುಮಾರ್ ಎಂ. ಮುದಾಳೆ ಹಾಗೂ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಶಿವಕುಮಾರ್ ನೀಲಿಕಟ್ಟಿ ಪ್ರಕಟಣೆಗೆ ಸಹಿ ಹಾಕಿದ್ದಾರೆ.
ಅನಿಲಕುಮಾರ್ ಬೆಲ್ದಾರ್ ಅವರು ಕಳೆದ ಮೂರು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸಲು ನಿರಂತರವಾಗಿ ಕೆಲಸ ಮಾಡುತ್ತಿದ್ದು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ಸಮುದಾಯಗಳ ಪರವಾಗಿ ವಿವಿಧ ಚಳವಳಿಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಾಮಾಜಿಕ ಚಟುವಟಿಕೆಗಳಲ್ಲಿಯೂ ಸದಾ ಮುಂಚೂಣಿಯಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಬೆಲ್ದಾರ್ ಅವರು ಹಲವು ಜನಪರ ಹೋರಾಟಗಳಲ್ಲಿ ಭಾಗವಹಿಸಿದ್ದು, ರಾಜ್ಯ ಶೋಷಿತ ಸಮುದಾಯಗಳ ಒಕ್ಕೂಟದ ಸಹ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಔರಾದ್ ಕ್ಷೇತ್ರದ ವೀಕ್ಷಕರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದು, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಬೆಲ್ದಾರ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ಶೋಷಿತ ವರ್ಗಗಳ ಜೊತೆಗೆ ಎಲ್ಲ ಸಮುದಾಯಗಳ ಬೆಂಬಲ ಪಕ್ಷಕ್ಕೆ ದೊರೆಯಲಿದೆ. ಇದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆ ಮತ್ತಷ್ಟು ಬಲಗೊಳ್ಳಲಿದ್ದು, ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.