ಬೀದರ್ | ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಜಿಲ್ಲಾ ಕಾಂಗ್ರೆಸ್‌ನ ಅತೃಪ್ತ ನಾಯಕರು
ಬೀದರ್ : ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಜಿಲ್ಲೆಯಲ್ಲಿನ ಕಾಂಗ್ರೆಸ್ ಅತೃಪ್ತ ನಾಯಕರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಸಮಸ್ಯೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ. ಮುಂದಿನ ದಿನಗಳಲ್ಲಿ ಸಮಯ ನಿಗದಿ ಮಾಡಿ ಜಿಲ್ಲೆಯ ಎಲ್ಲ ಅತೃಪ್ತರ ಆಯೋಗ ಇನ್ನೊಂದು ಸಲ ರಾಜ್ಯ ನಾಯಕರ ಜೊತೆ ಸೇರಿ ಚರ್ಚೆ ಮಾಡಲಾಗುತ್ತದೆ ಎನ್ನಲಾಗಿದೆ.
ಸದ್ಯಕ್ಕೆ ಡಿ.ಕೆ.ಶಿವಕುಮಾರ್ ಅವರ ಹತ್ತಿರ ಚರ್ಚೆ ಮಾಡುವುದಕ್ಕಾಗಿ ಸಮಯ ಕೇಳಲಾಗಿದ್ದು, ಅವರು ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿನ ಸಮಸ್ಯೆಗಳ ಕುರಿತು ಚರ್ಚೆಗೆ ಸಮಯ ನೀಡಲಾಗುವುದು ಹಾಗೆಯೇ ಶೀಘ್ರದಲ್ಲೇ ಒಂದು ತಂಡ ಜಿಲ್ಲೆಯ ಅಧ್ಯಯನಕ್ಕೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎನ್ನುವ ಮಾಹಿತಿ ದೊರೆತಿದೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ರಾಜಶೇಖರ್ ಪಾಟೀಲ್, ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ್ ತಾಳಂಪಳ್ಳಿ, ಡಿಸಿಸಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಮೂಲಗೆ, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ, ಕೆಪಿಸಿಸಿ ಸಂಯೋಜಕ ಅಜಮತ್ ಪಟೇಲ್, ಕೆಪಿಸಿಸಿ ಅಲ್ಪ ಸಂಖ್ಯಾತರ ಇಲಾಖೆಯ ಉಪಾಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್ ಹಾಗೂ ಪಂಡಿತರಾವ್ ಚಿದ್ರಿ ಇದ್ದರು.