×
Ad

Bidar | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ : ನ್ಯಾ.ರಾಘವೇಂದ್ರ ಉಪಾಧ್ಯ

ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

Update: 2026-06-12 22:10 IST

ಬೀದರ್: ಸಮಾಜಕ್ಕೆ ಪಿಡುಗಾಗಿ ಪರಿಣಮಿಸಿರುವ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಬೀದರ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯ ಕರೆ ನೀಡಿದರು.

ನಗರದ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದಲ್ಲಿ ಬಾಲಕಾರ್ಮಿಕ ಪದ್ಧತಿ ವಿರುದ್ಧ ಕಾನೂನುಬದ್ಧ ನಿರ್ಬಂಧಗಳಿದ್ದು, ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ಪೋಷಕರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.

ಮಕ್ಕಳು ಮನೆಯಲ್ಲಿನ ಸಣ್ಣಪುಟ್ಟ ಕೆಲಸಗಳಲ್ಲಿ ಸಹಕರಿಸುವುದು ಹಿರಿಯರಿಗೆ ಗೌರವ ತೋರಿದಂತಾಗಬಹುದು. ಆದರೆ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗದಲ್ಲಿ ಹಾಗೂ 14ರಿಂದ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಕೆಲಸಗಳಲ್ಲಿ ತೊಡಗಿಸುವುದು ಕಾನೂನುಬಾಹಿರವಾಗಿದ್ದು, ತಪ್ಪಿತಸ್ಥರಿಗೆ ಜೈಲು ಶಿಕ್ಷೆಯೂ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು.

ಬಾಲಕಾರ್ಮಿಕ ಮಕ್ಕಳಿಗೂ ಇತರ ಮಕ್ಕಳಂತೆ ಉತ್ತಮ ಶಿಕ್ಷಣ ಪಡೆಯುವ ಹಕ್ಕು ಇದೆ. ಬಾಲಕಾರ್ಮಿಕತೆಯಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಕುಂಠಿತಗೊಳ್ಳುವುದಲ್ಲದೆ, ದೇಶದ ಅಭಿವೃದ್ಧಿಗೂ ಅಡ್ಡಿಯಾಗುತ್ತದೆ. ಆದ್ದರಿಂದ ಮಕ್ಕಳ ಹಕ್ಕುಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಮಕ್ಕಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಶಿಕ್ಷಣ ಅತ್ಯಗತ್ಯವಾಗಿದೆ. ಪ್ರತಿಯೊಬ್ಬ ಮಗು ಕನಿಷ್ಠ 18 ವರ್ಷ ವಯಸ್ಸಿನವರೆಗೆ ಶಿಕ್ಷಣ ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಬಾಲಕಾರ್ಮಿಕತೆ ಅಥವಾ ಮಕ್ಕಳ ಮೇಲಿನ ಯಾವುದೇ ಶೋಷಣೆ, ಸಮಸ್ಯೆಗಳ ಕುರಿತು ಮಾಹಿತಿ ದೊರೆತರೆ 1098 ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೀರಿಶ್ ದಿಲೀಪ್ ಬದೋಲೆ, ಬೀದರ್ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಓಂಕಾರ್ ಎಸ್.ಆರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಮಠಪತಿ ಸಂಜಯ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಾರದಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸೀಮಪ್ಪಾ ಬಿ.ಸರ್ಕುರೆ, ಸಂಜು ಪಾಟೀಲ್, ಬಾಲ ಕಾರ್ಮಿಕ ಸೋಸೈಟಿ ಯೋಜನಾ ನಿರ್ದೇಶಕ ಅರ್ಜುನ್ ಸಿತಾಳಗೇರಾ, ಕಾರ್ಮಿಕ ನಿರೀಕ್ಷಕಿ ಕೆ.ಸುವರ್ಣಾ, ಸಂತೋಷ್ ಗಾಯಕವಾಡ್, ರಾಹುಲ್ ರತ್ನಾಕರ್ ಹಾಗೂ ಮಂಜುನಾಥ್ ಸೇರಿದಂತೆ ಕಾರ್ಮಿಕ ಇಲಾಖೆ ಸಿಬ್ಬಂದಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News