Bidar | ರಸಗೊಬ್ಬರ ದುಬಾರಿ ದರ ವಸೂಲಿ ವಿರುದ್ಧ ಕ್ರಮಕ್ಕೆ ರೈತ ಸಂಘ ಒತ್ತಾಯ
ಬೀದರ್: ಜಿಲ್ಲೆಯ ವಿವಿಧ ಭಾಗಗಳಲ್ಲಿ ರಸಗೊಬ್ಬರಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಒತ್ತಾಯಿಸಿದೆ.
ಶುಕ್ರವಾರ ಜಂಟಿ ಕೃಷಿ ನಿರ್ದೇಶಕರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, 2026ರ ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ (ಪಿಕೆಪಿಎಸ್) ಸಮರ್ಪಕ ಪ್ರಮಾಣದಲ್ಲಿ ರಸಗೊಬ್ಬರ ಲಭ್ಯವಿಲ್ಲ. ಇದರಿಂದ ರೈತರು ಖಾಸಗಿ ಅಂಗಡಿಗಳನ್ನು ಅವಲಂಬಿಸುವಂತಾಗಿದೆ ಎಂದು ದೂರಲಾಗಿದೆ.
ಡಿಎಪಿ ರಸಗೊಬ್ಬರದ ನಿಗದಿತ ದರ 1,350 ರೂ. ಇದ್ದರೂ, ಕೆಲ ವ್ಯಾಪಾರಿಗಳು 1,800 ರೂ. ನೀಡಿದರೆ ಮಾತ್ರ ಗೊಬ್ಬರ ನೀಡುವುದಾಗಿ ಹೇಳುತ್ತಿದ್ದಾರೆ. ಹೆಚ್ಚುವರಿ ಹಣ ನೀಡಲು ನಿರಾಕರಿಸುವ ರೈತರಿಗೆ ಗೊಬ್ಬರ ದಾಸ್ತಾನು ಇಲ್ಲ ಎಂದು ಹೇಳಿ ವಾಪಸ್ ಕಳುಹಿಸಲಾಗುತ್ತಿದೆ ಎಂದು ಸಂಘ ಆರೋಪಿಸಿದೆ.
ಈ ಹಿನ್ನೆಲೆಯಲ್ಲಿ ತಕ್ಷಣವೇ ಪರಿಶೀಲನೆ ನಡೆಸಿ ಕಾಳಬಜಾರ್ ನಡೆಸುತ್ತಿರುವ ಅಂಗಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೆ, ರೈತರಿಗೆ ಸರ್ಕಾರ ನಿಗದಿಪಡಿಸಿರುವ ದರದಲ್ಲೇ ರಸಗೊಬ್ಬರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯದಿದ್ದರೆ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಕೆ ನೀಡಿವೆ.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ್ ಬಿರಾದಾರ್, ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಸ್ವಾಮಿ ಸಿರ್ಸಿ ಉಪಸ್ಥಿತರಿದ್ದರು.