×
Ad

Bidar | ಬರ ಘೋಷಣೆ, ಸಾಲ ಮನ್ನಾಕ್ಕೆ ಆಗ್ರಹಿಸಿ ಸಿಎಂ ಡಿ.ಕೆ.ಶಿವಕುಮಾರ್‌ಗೆ ರೈತರಿಂದ ಮನವಿ

ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ, ಕಬ್ಬು ಬಾಕಿ ಹಣ ಬಿಡುಗಡೆಗೆ ಒತ್ತಾಯ

Update: 2026-07-07 16:20 IST

ಬೀದರ್: ಜಿಲ್ಲೆಯ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಮುಂಗಾರು ಆರಂಭವಾಗಿ ಒಂದು ತಿಂಗಳು ಕಳೆದರೂ ಸಮರ್ಪಕ ಮಳೆಯಾಗದ ಕಾರಣ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆಗಾಗಿ ಬೀಜ ಮತ್ತು ಗೊಬ್ಬರ ಖರೀದಿಸಿದ್ದರೂ ಮಳೆಯ ಕೊರತೆಯಿಂದ ಬೆಳೆ ಹಾನಿಯಾಗುವ ಭೀತಿ ಎದುರಾಗಿದೆ. ಆದ್ದರಿಂದ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡುವುದರ ಜೊತೆಗೆ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಸಂಘ ಒತ್ತಾಯಿಸಿದೆ.

ಮುಂಬರುವ ದಿನಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಮೋಡ ಬಿತ್ತನೆ ನಡೆಸಿ ಮಳೆ ಸುರಿಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಗೌರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಆರು ತಿಂಗಳು ಕಳೆದರೂ ಸಂಪೂರ್ಣ ಬಾಕಿ ಹಣ ಪಾವತಿಸಿಲ್ಲ. ಅದನ್ನು ತಕ್ಷಣ ಬಿಡುಗಡೆ ಮಾಡಬೇಕು. ಅಲ್ಲದೇ ಎನ್‌ಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯು ಪ್ರತಿ ಟನ್‌ಗೆ 100 ರೂ. ಹಾಗೂ ಭವಾನಿ ಸಕ್ಕರೆ ಕಾರ್ಖಾನೆಯು ಸರ್ಕಾರದ ವಂತಿಗೆಯಾಗಿ ಪ್ರತಿ ಟನ್‌ಗೆ 50 ರೂ. ಬಾಕಿ ಉಳಿಸಿಕೊಂಡಿದ್ದು, ಅದನ್ನೂ ಕೂಡಲೇ ಪಾವತಿಸಬೇಕು ಎಂದು ರೈತ ಸಂಘ ಒತ್ತಾಯಿಸಿದೆ.

ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಕೆ ಮಾಡಿದ ರೈತರಿಗೆ ಪ್ರತಿ ಟನ್‌ಗೆ 1 ಕೆ.ಜಿ. ಸಕ್ಕರೆ ಉಚಿತವಾಗಿ ನೀಡಬೇಕು. ಕಬ್ಬು ಸಾಗಣೆ ಮಾಡದ ಷೇರು ಸದಸ್ಯರಿಗೆ ತಲಾ 5 ಕೆ.ಜಿ. ಸಕ್ಕರೆ ವಿತರಿಸುವ ವ್ಯವಸ್ಥೆ ಜಾರಿಗೊಳಿಸುವಂತೆ ಮನವಿ ಮಾಡಲಾಗಿದೆ.

ರೈತರ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವ ಮೂಲಕ ಸರ್ಕಾರ ತನ್ನ ರೈತಪರ ಬದ್ಧತೆಯನ್ನು ತೋರಿಸಬೇಕು ಎಂದು ಸಂಘದ ಮುಖಂಡರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ್ ಬಿರಾದಾರ್, ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಸ್ವಾಮಿ ಸಿರ್ಸಿ,‌ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಶೋಭಾವತಿ ಕಾರಬಾರಿ ಹಾಗೂ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್ ಜಮಖಂಡೆ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಾಧ್ಯಕ್ಷರು ಹಾಗೂ ರೈತ ಮುಖಂಡರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News