ಬೀದರ್‌: ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಾರೆ. ಆದರೆ, ಕೆಲಸದ ಒತ್ತಡದ ನಡುವೆ ತಮ್ಮ ಸ್ವಂತ ಆರೋಗ್ಯವನ್ನು ನಿರ್ಲಕ್ಷಿಸಬಾರದು. ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾದ ಅಧಿಕಾರಿಗಳಿಂದ ಮಾತ್ರ ಜನತೆಗೆ ಉತ್ತಮ ಹಾಗೂ ತ್ವರಿತ ಸೇವೆ ಒದಗಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರಿ ನೌಕರರ ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ಹಾಗೂ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿರುವ ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಆರೋಗ್ಯ ಇಲಾಖೆಯ ಕಾರ್ಯವನ್ನು ಶ್ಲಾಘಿಸಿದ ಅವರು, ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಾವುದೇ ಹಿಂಜರಿಕೆಯಿಲ್ಲದೆ ಶಿಬಿರದ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಮಾತನಾಡಿ, ದಿನನಿತ್ಯದ ಕಚೇರಿ ಕೆಲಸದ ಒತ್ತಡ, ಬದಲಾದ ಆಹಾರ ಪದ್ಧತಿ ಹಾಗೂ ದೈಹಿಕ ಶ್ರಮದ ಕೊರತೆಯಿಂದಾಗಿ ಇಂದು ಜನರಲ್ಲಿ ರಕ್ತದೊತ್ತಡ (ಬಿಪಿ) ಹಾಗೂ ಮಧುಮೇಹ (ಶುಗರ್)ದಂತಹ ಗಂಭೀರ ಕಾಯಿಲೆಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿವೆ. ರೋಗ ಉಲ್ಬಣಿಸಿದ ಬಳಿಕ ಆಸ್ಪತ್ರೆಗೆ ಅಲೆಯುವ ಬದಲು, ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಜಾಣತನವಾಗಿದೆ ಎಂದು ತಿಳಿಸಿದರು.

ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಸಂಭವನೀಯ ಅಪಾಯಗಳನ್ನು ತಡೆಯಬಹುದು ಎಂದು ಅವರು ಕಿವಿಮಾತು ಹೇಳಿದರು.

ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಗಾಗಿ ಶ್ರಮಿಸುತ್ತಾ ತಮ್ಮ ಸ್ವಂತ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಸಾಮಾನ್ಯವಾಗಿದೆ. ಇದನ್ನು ಮನಗಂಡು ಈ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ. ಬೀದರ್ ತಾಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಾವುದೇ ನೆಪ ಹೇಳದೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳಬೇಕು. ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಅಗತ್ಯವಿರುವವರು ವೈದ್ಯರು ಸೂಚಿಸುವ ಸೂಕ್ತ ಚಿಕಿತ್ಸೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಕ್ತದಾನವು ಜೀವದಾನವಿದ್ದಂತೆ. ನಾವು ನೀಡುವ ರಕ್ತವು ತುರ್ತು ಸಂದರ್ಭದಲ್ಲಿ ಮತ್ತೊಬ್ಬರ ಪ್ರಾಣ ಉಳಿಸಲು ಸಹಕಾರಿಯಾಗುತ್ತದೆ. ಹೀಗಾಗಿ ಶಿಬಿರದಲ್ಲಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಇಚ್ಛಿಸುವವರು ತಮ್ಮ ಹೆಸರನ್ನು ನೋಂದಾಯಿಸಿಕೊಂಡು ರಕ್ತದಾನ ಮಾಡುವ ಮೂಲಕ ಈ ಪುಣ್ಯ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿಯ ಎಲ್ಲ ಶಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ, ಜಿಲ್ಲೆಯ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವೈದ್ಯಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor