Bidar | ಹಡಪದ ಅಪ್ಪಣ್ಣನವರ ತತ್ವಗಳು ಇಂದಿಗೂ ಪ್ರಸ್ತುತ: ಬಸವಪ್ರಭು ಸ್ವಾಮೀಜಿ
ಬೀದರ್: ಹಡಪದ ಅಪ್ಪಣ್ಣನವರು ಕಾಯಕ ಮತ್ತು ನಿಷ್ಠೆಯ ಮೂಲಕ ಸಮಾಜಕ್ಕೆ ಆದರ್ಶವಾಗಿದ್ದು, ಅವರ ವಚನಗಳಲ್ಲಿರುವ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಗುಣತೀರ್ಥವಾಡಿಯ ಬಸವಪ್ರಭು ಸ್ವಾಮೀಜಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಆಯೋಜಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.
12ನೇ ಶತಮಾನದ ಶರಣ ಕ್ರಾಂತಿಯಲ್ಲಿ ಹಡಪದ ಅಪ್ಪಣ್ಣನವರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು. ಕಾಯಕವೇ ಕೈಲಾಸ ಎಂಬ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡ ಅವರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಪ್ರತಿಯೊಂದು ಕಾರ್ಯದಲ್ಲೂ ನೆರಳಿನಂತೆ ಜೊತೆಯಾಗಿ ಕಾರ್ಯನಿರ್ವಹಿಸಿದರು. ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲೂ ಮಹತ್ವದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದರು ಎಂದು ತಿಳಿಸಿದರು.
ಶಿವಶರಣಪ್ಪ ವಾಲಿ ಮಾತನಾಡಿ, ಹಡಪದ ಅಪ್ಪಣ್ಣನವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗದೆ ಸಮತಾವಾದಿ ಚಿಂತನೆಗಳ ಮೂಲಕ ಇಡೀ ಮಾನವಕುಲಕ್ಕೆ ದಾರಿದೀಪವಾಗಿದ್ದಾರೆ. ಅವರ ವಚನ ಸಾಹಿತ್ಯವು ಶೋಷಣೆ ರಹಿತ ಸಮಾಜ ನಿರ್ಮಾಣದ ಆಶಯವನ್ನು ಒಳಗೊಂಡಿದ್ದು, ಇಂದಿನ ಯುವಜನತೆ ಶರಣರ ವಿಚಾರಧಾರೆಗಳನ್ನು ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಇದಕ್ಕೂ ಮುನ್ನ ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರಿನ ಶಿವಾಜಿ ವೃತ್ತದಿಂದ ವಿವಿಧ ಪ್ರಮುಖ ರಸ್ತೆಗಳಲ್ಲಿ ಹಡಪದ ಅಪ್ಪಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಬೀದರ್ ತಹಶೀಲ್ದಾರ್ ಜಿಯಾವುದ್ದೀನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಶಿಂಧೆ, ಬೀದರ್ ಜಿಲ್ಲಾ ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷ ದತ್ತಾತ್ರೇಯ ಬಾಂದೇಕರ್ ಹಾಗೂ ಸಮಾಜದ ಮುಖಂಡರಾದ ಸಂಗಮೇಶ್ ಎಣಕೂರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.