Bidar | ವಿಬಿ-ಜಿ ರಾಮ್ ಜಿ ಯೋಜನೆ ಮಾಹಿತಿ ಪಡೆಯಲು ಸಹಾಯವಾಣಿ ಆರಂಭ
ಬೀದರ್: ಗ್ರಾಮೀಣ ಪ್ರದೇಶದ ಜನರಿಗೆ ವಿಬಿ-ಜಿ ರಾಮ್ ಜಿ ಯೋಜನೆಗೆ ಸಂಬಂಧಿಸಿದ ಮಾಹಿತಿ ಒದಗಿಸುವ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯೋಜನೆ ಅನುಷ್ಠಾನಕ್ಕೆ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತ್ನ ವಿಬಿ-ಜಿ ರಾಮ್ ಜಿ ಯೋಜನೆ ಶಾಖೆಯಲ್ಲಿ 94808 56005 ಸಂಖ್ಯೆಯ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರು ವಿಬಿ-ಜಿ ರಾಮ್ ಜಿ ಯೋಜನೆಯಡಿ ಲಭ್ಯವಿರುವ ಕೂಲಿ ಕೆಲಸದ ಮಾಹಿತಿ, ಕಾಮಗಾರಿಗಳ ವಿವರ, ಕೂಲಿ ಪಾವತಿ, ಕೆಲಸದ ಬೇಡಿಕೆ ಸಲ್ಲಿಸುವ ವಿಧಾನ, ಕಾಮಗಾರಿಗಳ ಅನುಷ್ಠಾನ, ಉದ್ಯೋಗ ಚೀಟಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಕೂಲಿ ಪಾವತಿಯಲ್ಲಿ ವಿಳಂಬವಾಗಿರುವುದಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಬಹುದು. ಅಲ್ಲದೆ, ಯೋಜನೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಸಹಾಯವಾಣಿ ಸಂಖ್ಯೆ 94808 56005ಕ್ಕೆ ಕರೆ ಮಾಡಿ ಮಾರ್ಗದರ್ಶನ ಹಾಗೂ ಪರಿಹಾರ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಯೋಜನೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಕರೆ ಮಾಡುವಾಗ ಸಾರ್ವಜನಿಕರು ತಮ್ಮ ಗ್ರಾಮ ಪಂಚಾಯಿತಿಯ ಹೆಸರು, ಕೆಲಸದ ವಿವರ ಹಾಗೂ ಸಮಸ್ಯೆಗೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.