×
Ad

ಬೀದರ್ | ಜಿಲ್ಲೆಯಲ್ಲಿ ಬಾಲ್ಯ ವಿವಾಹ ಕಂಡು ಬಂದಲ್ಲಿ ಪ್ರಕರಣ ದಾಖಲಿಸಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Update: 2025-06-20 21:24 IST

ಬೀದರ್ : ಜಿಲ್ಲೆಯಲ್ಲಿ ಎಲ್ಲಿಯಾದರೂ ಬಾಲ್ಯ ವಿವಾಹ ಕಂಡು ಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ತಡೆಗಟ್ಟುವ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಿದ್ದು, ಅವುಗಳನ್ನು ತಡೆಯುವ ಕೆಲಸ ಅಧಿಕಾರಿಗಳು ಮಾಡಬೇಕು. ಹಾಗೆಯೇ ಬಾಲ್ಯ ವಿವಾಹ ಮಾಡುತ್ತಿರುವ ಪೋಷಕ, ಪೂಜಾರಿ, ಕಲ್ಯಾಣ ಮಂಟಪದ ಮಾಲಕ ಮತ್ತು ಆಮಂತ್ರಣ ಪತ್ರಿಕೆ ಅಂಗಡಿಯ ಮಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಏಪ್ರಿಲ್ 2024 ರಿಂದ ಮಾರ್ಚ್ 2025 ರವರಿಗೆ ಜಿಲ್ಲೆಯಲ್ಲಿ ಒಟ್ಟು 58 ಬಾಲ್ಯ ವಿವಾಹ ಪ್ರಕರಣಗಳಲ್ಲಿ 55 ಬಾಲ್ಯ ವಿವಾಹ ತೆಗೆಯಲಾಗಿದೆ. 3 ಬಾಲ್ಯ ವಿವಾಹ ಜರಿಗಿದ್ದು, ಅವುಗಳ ವಿರುದ್ಧ ಪ್ರಕರಣ ದಾಖಲಾಗಿದೆ. 2025 ರ ಏಪ್ರಿಲ್, ಮೇ ತಿಂಗಳಲ್ಲಿ ಒಟ್ಟು 31 ಬಾಲ್ಯ ವಿವಾಹಗಳು ತಡೆಯಲಾಗಿದ್ದು, ಯಾವುದೇ ಬಾಲ್ಯ ವಿವಾಹ ಜರುಗಿರಲ್ಲ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 2024-2025ನೇ ಸಾಲಿನಲ್ಲಿ ಆರ್.ಸಿ.ಹೆಚ್ ಪೋರ್ಟಲ್ ನಲ್ಲಿ ನೋಂದಣಿಯಾದ ಬಾಲಗರ್ಭಿಣಿಯರ ಸಂಖ್ಯೆ 75 ಆಗಿದ್ದು, ಇದನ್ನು ನಾವು ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

2024-25ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 37 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿವೆ. ಆದ್ದರಿಂದ ಜನರಿಗೆ ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಪೋಕ್ಸೋ ಪ್ರಕರಣದ ಹೆಣ್ಣು ಮಕ್ಕಳನ್ನು ಸಖಿ ಓನ್ ಸೆಂಟರ್ ಮೂಲಕ ಕೌನ್ಸಿಲಿಂಗ್ ಮಾಡಿ ಒಂದೇ ಸೂರಿನಡಿ ಸಹಾಯ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಚಿಂದಿ ಆಯುವ ಮತ್ತು ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಕಾಪಾಡಿ ಅವರನ್ನು ಶಾಲೆಗೆ ದಾಖಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಭೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಮ್ಯಾ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀಧರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ್ ಹಾಗೂ ಡಿವೈಎಸ್‌ಪಿ ಶಿವನಗೌಡ ಪಾಟೀಲ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News