ಬೀದರ್ | ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಜಪ್ತಿಮಾಡಿದ ಪೊಲೀಸರು
ಬೀದರ್ : ಕಮಲನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಎರಡು ಕಡೆ ದಾಳಿ ನಡೆಸಿ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುವಾರ ಉದಗಿರ್ ರಸ್ತೆ ಮೂಲಕ ಗಡಿ ರಾಜ್ಯ ಮಹಾರಾಷ್ಟ್ರಕ್ಕೆ ಹಾಗೂ ಡಿಗ್ಗಿ ಗ್ರಾಮ ಪಂಚಾಯತ್ ಹತ್ತಿರ ಅನಧಿಕೃತವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಮಹಾರಾಷ್ಟ್ರಕ್ಕೆ ಅನಧೀಕೃತವಾಗಿ ಸಾಗಿಸುತ್ತಿದ್ದ ಸುಮಾರು 78,200 ರೂ. ಬೆಲೆ ಬಾಳುವ 46 ಚೀಲದಲ್ಲಿ ಒಟ್ಟು 23 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ಕೃತ್ಯಕ್ಕೆ ಬಳಸಿದ ವಾಹನ ಜಪ್ತಿ ಮಾಡಲಾಗಿದೆ. ಹಾಗೆಯೇ ಡಿಗ್ಗಿ ಗ್ರಾಮ ಪಂಚಾಯತ್ ಹತ್ತಿರ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 57,800 ರೂ. ಬೆಲೆ ಬಾಳುವ 34 ಚೀಲದಲ್ಲಿ ಒಟ್ಟು 17 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ಕೃತ್ಯಕ್ಕೆ ಬಳಸಿದ ಟೆಂಪೂ ವಾಹನ ಜಪ್ತಿ ಮಾಡಲಾಗಿದೆ. ಸಾಗಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಇನ್ನೊಬ್ಬ ಆರೋಪಿಯ ಬಂಧನಕ್ಕೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.