×
Ad

Bidar | ಶೇ.56 ಮೀಸಲಾತಿ ಕಾಯ್ದೆ 9ನೇ ಶೆಡ್ಯೂಲ್‌ಗೆ ಸೇರಿಸಿ : ವಿ.ಎಸ್.ಉಗ್ರಪ್ಪ ಆಗ್ರಹ

ನಕಲಿ ಜಾತಿ ಪ್ರಮಾಣಪತ್ರ ಹಾವಳಿ ತಡೆಗೂ ಒತ್ತಾಯ

Update: 2026-07-05 19:30 IST

ಬೀದರ್: ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ)ಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಜಾರಿಗೆ ತಂದಿರುವ ಶೇ.56 ಮೀಸಲಾತಿ ಕಾಯ್ದೆಯನ್ನು ತಕ್ಷಣವೇ ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸಬೇಕು. ಜೊತೆಗೆ ನಕಲಿ ಜಾತಿ ಪ್ರಮಾಣಪತ್ರಗಳ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಮೂರ್ತಿ ನಾಗಮೋಹನದಾಸ್ ಹಾಗೂ ನ್ಯಾಯಮೂರ್ತಿ ಸುಭಾಷ್ ಆಡಿ ಆಯೋಗಗಳ ಶಿಫಾರಸುಗಳ ಆಧಾರದ ಮೇಲೆ 2022ರಲ್ಲಿ ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಿ ಕಾಯ್ದೆ ಜಾರಿಗೆ ತರಲಾಗಿತ್ತು. ಆದರೆ, ಈ ಕಾಯ್ದೆಯನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಶೇ.56 ಮೀಸಲಾತಿಗೆ ತಡೆಯಾಜ್ಞೆ ನೀಡಿರುವುದು ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗಿದೆ ಎಂದು ಹೇಳಿದರು.

ಈ ತಡೆಯಾಜ್ಞೆಯಿಂದ 2023-24 ಮತ್ತು 2024-25ನೇ ಸಾಲಿನಲ್ಲಿ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ನಿರ್ಣಯ ಕೈಗೊಂಡಿದ್ದರೂ, ಕೇಂದ್ರ ಸರ್ಕಾರದ ಮೇಲೆ ಪರಿಣಾಮಕಾರಿ ಒತ್ತಡ ತರಲು ವಿಫಲವಾಗಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ನಕಲಿ ಜಾತಿ ಪ್ರಮಾಣಪತ್ರಗಳ ಮೂಲಕ ಮೀಸಲಾತಿ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಇದರಿಂದ ನೈಜ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಮೀಸಲಾತಿ ರಕ್ಷಣೆಗಾಗಿ ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷಗಳ ಸಭೆ ಕರೆದು, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಿಯೋಗವನ್ನು ದೆಹಲಿಗೆ ಕೊಂಡೊಯ್ದು ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಕಾಯ್ದೆಯನ್ನು 9ನೇ ಷೆಡ್ಯೂಲ್‌ಗೆ ಸೇರಿಸಲು ಒತ್ತಾಯಿಸಬೇಕು. ಹೈಕೋರ್ಟ್‌ನಲ್ಲಿರುವ ತಡೆಯಾಜ್ಞೆ ತೆರವುಗೊಳಿಸಲು ಸಮರ್ಥ ವಕೀಲರನ್ನು ನೇಮಿಸಿ, ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ನಕಲಿ ಜಾತಿ ಪ್ರಮಾಣಪತ್ರ ಪಡೆದು ಸೌಲಭ್ಯ ಪಡೆಯುತ್ತಿರುವವರ ವಿರುದ್ಧ ಹಾಗೂ ಸುಳ್ಳು ಪ್ರಮಾಣಪತ್ರ ವಿತರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ವಿ.ಎಸ್. ಉಗ್ರಪ್ಪ ಎಚ್ಚರಿಕೆ ನೀಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ರಾಜ್ಯ ಕಾರ್ಯಾಧ್ಯಕ್ಷ ಎಂ.ನರಸಿಂಹಯ್ಯ, ರಾಜ್ಯ ಉಪಾಧ್ಯಕ್ಷ ರಾಜಣ್ಣ ಚಿತ್ರದುರ್ಗ, ಖಜಾಂಚಿ ರಾಜಪ್ಪ ಬೆಂಗಳೂರು, ರಾಯಚೂರು ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ ಅಸ್ಕಿಹಾಳ್, ಜಿಲ್ಲಾ ಮಹಾಸಭಾ ಅಧ್ಯಕ್ಷ ದಶರಥ್ ಜಮಾದಾರ್, ಯುವ ಘಟಕದ ಜಿಲ್ಲಾಧ್ಯಕ್ಷ ದಿಲೀಪ್ ಪಾಟೀಲ್, ಜೈಶ್ರೀ, ಪ್ರಕಾಶ್ ದೇಸಾಯಿ, ಭೂವಿ ಸಮಾಜದ ಶೈಲೇಶ್, ವಾಲ್ಮೀಕಿ ನಾಯಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್, ಗೌರವಾಧ್ಯಕ್ಷ ಮನೋಹರ್ ಕಂಟೆ, ಶರಣಪ್ಪ ಖಾಶೆಂಪುರ್ ಹಾಗೂ ಷಣ್ಮುಖಪ್ಪ ಶೇಕಾಪುರ್‌ ಸೇರಿದಂತೆ ಸಮಾಜದ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News