×
Ad

ಬೀದರ್ | ಸಿಜೆಐ ಗವಾಯಿಯವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನಿಗೆ ಜೀವಾವಧಿ ಶಿಕ್ಷೆ ನೀಡಬೇಕು : ಮಹೇಶ್ ಗೊರನಾಳಕರ್

Update: 2025-10-07 11:54 IST

ಬೀದರ್ : ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರಿಗೆ ವಕೀಲನೊಬ್ಬನು ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ಆರ್ ಪಿ ಐ (ಅಂಬೇಡ್ಕರ್) ಪಕ್ಷ ಕರ್ನಾಟಕ ತೀವ್ರವಾಗಿ ಖಂಡಿಸುತದೆ. ಆ ವಕೀಲನ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ, ಜೀವಾವಧಿ ಶಿಕ್ಷೆ ನೀಡಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ದ ರಾಜ್ಯಾಧ್ಯಕ್ಷ ಮಹೇಶ್ ಗೋರನಾಳಕರ್ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.

ಮುಖ್ಯನ್ಯಾಯಮೂರ್ತಿ ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ವಕೀಲನನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು. ಬುದ್ಧ ಮತ್ತು ಡಾ.ಅಂಬೇಡ್ಕರ್ ಅನುಯಾಯಿಯಾದ ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದ್ದಾರೆ. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭದ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕಿವೆ. ಈ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಈ ಘಟನೆಯನ್ನು ಖಂಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಶೂ ಎಸೆದು ಅವಮಾನಿಸಿರುವ ವಕೀಲನ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ, ಜೀವಾವಧಿ ಶಿಕ್ಷೆ ಒದಗಿಸಬೇಕು. ತಪ್ಪಿತಸ್ಥ ವ್ಯಕ್ತಿಯ ವಕೀಲರ ಸಂಘದಲ್ಲಿರುವ ಸದಸ್ಯತ್ವವನ್ನು ಖಾಯಂ ಆಗಿ ರದ್ದುಪಡಿಸಬೇಕು. ಕೇಂದ್ರ ಸರ್ಕಾರ ಆ ವಕೀಲನ ವಿರುದ್ಧ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಡಾ.ಅಂಬೇಡ್ಕರ್, ಭಾರತೀಯ ಸಂವಿಧಾನ, ನ್ಯಾಯಮೂರ್ತಿ ಮತ್ತು ನ್ಯಾಯಾಲಯಕ್ಕೆ ಅವಮಾನಿಸುವ ವ್ಯಕ್ತಿಗಳ ಮೇಲೆ ಕಡ್ಡಾಯವಾಗಿ ದೇಶ ದ್ರೋಹದ ಪ್ರಕರಣ ದಾಖಲಿಸಲು ಹೊಸ ಕಾನೂನು ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News