ಬೀದರ್ | ಕಾಲುಬಾಯಿ ಜ್ವರ, ರೋಗ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ : ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ
ಬೀದರ್ : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ನ.3 ರಿಂದ ಡಿ.3ರ ವರೆಗೆ ಜಾನುವಾರುಗಳಿಗೆ ಎಂಟನೇ ಹಂತದ ಕಾಲುಬಾಯಿ ಜ್ವರಕ್ಕೆ ಲಸಿಕೆ ನೀಡಲಾಗುತ್ತಿದ್ದು, ಈ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮ ಸಂಬಂಧ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲ ಗ್ರಾಮಗಳಲ್ಲಿ ಎಲ್ಲ ಜಾನುವಾರುಗಳಿಗೆ ಈ ಲಸಿಕಾ ಚುಚ್ಚುಮದ್ದು ಲಭ್ಯವಾಗುವಂತೆ ವ್ಯಾಪಕ ಪ್ರಚಾರ ಮಾಡಬೇಕು. ಗ್ರಾಮ ಮಟ್ಟದಲ್ಲಿ ಪಿಡಿಓ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಕೃಷಿ ಸಖಿಯರು, ಕೆಎಂಎಫ್ ಹಾಗೂ ಶಿಕ್ಷಣ ಇಲಾಖೆ ಸೇರಿ ಈ ಲಸಿಕೆ ಕಾರ್ಯಕ್ರಮ ಕುರಿತು ಪ್ರಚಾರ ಮಾಡುವಂತೆ ಅವರು ತಿಳಿಸಿದರು.
ಎಲ್ಲ ಗ್ರಾಮಗಳಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಡಂಗೂರು ಸಾರುವಂತೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ಒಂದು ಲಕ್ಷ ಜಾನುವಾರು ಕಡಿಮೆಯಾಗಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು. ಇಂಟಿಗ್ರೇಟೆಡ್ ಫಾರ್ಮಿಂಗ್‍ಗೆ ಹೆಚ್ಚು ಒತ್ತು ನೀಡುವ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕು. ಲಸಿಕೆಗಳು, ಸಿರೀಂಜ್ ಹಾಗೂ ತುರ್ತು ಔಷಧಿಗಳು ಸರಿಯಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ.ನರಸಪ್ಪ ಎ.ಡಿ ಅವರು ಮಾತನಾಡಿ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡಗಳನ್ನು ರಚಿಸಲಾಗಿದೆ. ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಸೂರ್ಯಕಾಂತ್ ಬಿರಾದಾರ್ ಹಾಗೂ ತಾಲ್ಲೂಕು ಮಟ್ಟದ ಪಶು ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.