Bidar | ಸ್ವಾತಂತ್ರ್ಯ ದಿನಾಚರಣೆ ಆದ್ಧೂರಿಯಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಿ : ಡಿಸಿ ಶಿಲ್ಪಾ ಶರ್ಮಾ
ಬೀದರ್ : ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣ ಹಾಗೂ ವೈಭವಯುತವಾಗಿ ಆಚರಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳು, ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿ, ಬಳಿಕ ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಮುಖ್ಯ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿದರು.
ಸರ್ಕಾರದ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ ಪಾಲಿಸಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು. ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡಬೇಕು. ಕ್ರೀಡಾಂಗಣದಲ್ಲಿ ಕುಡಿಯುವ ನೀರು, ನೆರಳು, ಅಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ಸಾರುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ದಿನಾಚರಣೆಯನ್ನು ಅರ್ಥಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೊಲೆ ಮಾತನಾಡಿ, ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ನಗರಸಭೆ ಅಧಿಕಾರಿಗಳು ಕಟ್ಟುನಿಟ್ಟಿನ ಪರಿಶೀಲನೆ ನಡೆಸಬೇಕು ಎಂದರು.
ಎಲ್ಲ ಗ್ರಾಮ ಪಂಚಾಯಿತಿಗಳು ಹಾಗೂ ತಾಲೂಕು ಪಂಚಾಯಿತಿ ಕಚೇರಿಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ನೆರವೇರಿಸಿ, ವಿಶೇಷ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಬೇಕು. ಸಾರ್ವಜನಿಕರಲ್ಲಿ ರಾಷ್ಟ್ರಧ್ವಜದ ಗೌರವ ಹಾಗೂ ಪ್ಲಾಸ್ಟಿಕ್ ಮುಕ್ತ ಧ್ವಜ ಬಳಕೆಯ ಕುರಿತು ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಅಪರ ಜಿಲ್ಲಾಧಿಕಾರಿ ಶಿವನಾಂದ್ ಕರಾಳೆ ಹಾಗೂ ಸಹಾಯಕ ಆಯುಕ್ತ ಮಹಮ್ಮದ್ ಶಕೀಲ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರರು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.