VBidar | ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಎನ್‌ಎಸ್‌ಯುಐ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Update: 2026-07-24 21:40 IST

ಬೀದರ್: ನೀಟ್, ಯುಜಿಸಿ-ನೆಟ್, ಸಿಯುಇಟಿ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳು ಹಾಗೂ ಆಡಳಿತಾತ್ಮಕ ವೈಫಲ್ಯಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಎನ್‌ಎಸ್‌ಯುಐ ನೇತೃತ್ವದಲ್ಲಿ ಭಾಲ್ಕಿಯಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಮಹಾತ್ಮ ಗಾಂಧಿ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಮೂಲಕ ತಹಸೀಲ್ದಾರ್ ಕಚೇರಿವರೆಗೆ ಸಾಗಿತು. ಸಾವಿರಾರು ವಿದ್ಯಾರ್ಥಿಗಳು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನೆಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಿಂದ ಮೃತಪಟ್ಟ ವಿದ್ಯಾರ್ಥಿಗಳಿಗೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಬಳಿಕ ತಹಸೀಲ್ದಾರ್ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ನೀಟ್, ಯುಜಿಸಿ-ನೆಟ್, ಸಿಯುಇಟಿ ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಪದೇ ಪದೇ ಪ್ರಶ್ನೆಪತ್ರಿಕೆ ಸೋರಿಕೆಯಾಗುತ್ತಿರುವುದು ಮತ್ತು ಅಕ್ರಮಗಳು ನಡೆಯುತ್ತಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ತಾಲೂಕು ಘಟಕದ ಅಧ್ಯಕ್ಷ ಗಣೇಶ್, ಉಪಾಧ್ಯಕ್ಷ ಅಜಯ್ ಟೊಣ್ಣೆ, ಕಾರ್ಯದರ್ಶಿ ರೋಹನ್ ಸಿಂಧೆ, ಜಿಲ್ಲಾ ಉಪಾಧ್ಯಕ್ಷ ಮಹಾದೇವ್ ಧುಮಾಳೆ, ಚೇತನ್ ಬಿರಾದರ್, ರಾಹುಲ್ ಮೇತ್ರೆ, ಶಿವಕುಮಾರ್ ರಾಜಭವನ್, ಶಿವಕುಮಾರ್ ಮಡಿವಾಳ್, ಗಜಾನಂದ್ ಚಳಕಾಪುರ್, ಕನಕ ಬಿರಾದರ್‌, ಜಯಪಾಲ್‌ ಬೋರಾಳೆ ಹಾಗೂ ಮಹಾಂತೇಶ್ ಮಾಂಜ್ರೆ ಸೇರಿದಂತೆ ಎನ್‌ಎಸ್‌ಯುಐ ಪದಾಧಿಕಾರಿಗಳು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News