ಬೀದರ್: ಮಳೆಯಿಲ್ಲದೆ ಬೆಳೆ ನಷ್ಟವಾಗಿರಬಹುದು. ಆದರೆ, ಧೈರ್ಯ ಕಳೆದುಕೊಳ್ಳಬೇಡಿ. ನಿಮ್ಮೊಂದಿಗೆ ನಾವಿದ್ದೇವೆ. ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಅಗತ್ಯ ಕ್ರಮ ಕೈಗೊಂಡು, ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವ್ ವಿಠ್ಠಲರಾವ್ ಭರವಸೆ ನೀಡಿದರು.

ಬಸವಕಲ್ಯಾಣ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಬೆಳಗಿನ ನಡೆ ಗ್ರಾಮಗಳ ಕಡೆ’ ಕಾರ್ಯಕ್ರಮದ ಅಂಗವಾಗಿ ಅಲಗೂಡ್, ಭೋಸ್ಗಾ ಹಾಗೂ ಕೋಹಿನೂರ್ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ಅವರು, ಗ್ರಾಮಗಳ ಪ್ರಮುಖ ಬಡಾವಣೆಗಳಲ್ಲಿ ಸಂಚರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಗ್ರಾಮಸ್ಥರು ಮಳೆಯ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ತೊಂದರೆಗಳನ್ನು ಎದುರಿಸುತ್ತಿರುವುದಾಗಿ ಅಧಿಕಾರಿಗಳ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಅವರು, ಮಳೆಯ ಅಭಾವದಿಂದ ಅನೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ಸಮಸ್ಯೆ ಇರುವ ಗ್ರಾಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ಒಂದು ವಾರದೊಳಗೆ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಬಿ-ಜಿ ರಾಮ್-ಜಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ಅವರು, ಕಾರ್ಮಿಕರೊಂದಿಗೆ ಮಾತನಾಡಿ, ನಿಮ್ಮ ಕೂಲಿ ಹಣ ಎಲ್ಲಿಯೂ ಹೋಗುವುದಿಲ್ಲ. ನೀವು ಧೈರ್ಯವಾಗಿ ಕೆಲಸ ಮಾಡಿ. ಕಾರ್ಮಿಕರಿಗೆ ನಿರಂತರವಾಗಿ ಕೆಲಸ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯಲ್ಲಿ ಲಭ್ಯವಿರುವ ಔಷಧಗಳು ಹಾಗೂ ಮಾತ್ರೆಗಳ ದಾಸ್ತಾನು ಪರಿಶೀಲಿಸಿದರು. ಸಾರ್ವಜನಿಕರಿಗೆ ಅಗತ್ಯ ಆರೋಗ್ಯ ಸೇವೆಗಳು ಸಮರ್ಪಕವಾಗಿ ದೊರೆಯುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಸಿಬ್ಬಂದಿಗೆ ಸೂಚನೆ ನೀಡಿದರು. ಅಂಗನವಾಡಿಗೂ ಭೇಟಿ ನೀಡಿ, ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಸುಲ್ಪಿ, ಮಹ್ಮದ್ ಸಲೀಂ, ಎಇಇ ಸಂಜುಕುಮಾರ್, ಎಇ ಸುನೀಲ್‌ಕುಮಾರ್, ಪಿಡಿಒ ಸುಲೋಚನಾ ಬಂಡೆ, ಶಿವಾಜಿ ಚವ್ಹಾಣ, ಮೊಹ್ಮದ್ ಪಾಶಾ, ಟಿಸಿ ಶಿವರಾಜ್ ಪಾಟೀಲ್, ಐಇಸಿ ಸಂಯೋಜಕ ವೀರಾರೆಡ್ಡಿ, ಟಿಎಗಳಾದ ಮಲ್ಲಿಕಾರ್ಜುನ್ ಜಾಧವ್, ರವಿ ಕೊರಾಳೆ, ಜಲೀಲ್ ಅಹ್ಮದ್, ಮಾಣಿಕ್, ಸುಭಾಷ್, ಸೂರ್ಯಕಾಂತ್, ಬಿಎಫ್‌ಟಿಗಳಾದ ರಾಮ್, ಸತೀಶ್, ಮಹಾದೇವ್, ಶರಣು, ದೇವೇಂದ್ರ ಹಾಗೂ ಮಹಾರುದ್ರ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor