ಬೀದರ್: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ವಿವಿಧ ಇಲಾಖೆಗಳ ಮೂಲಕ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಮೇಲ್ವಿಚಾರಕರನ್ನು ಅಂತರ್‌ಜಿಲ್ಲಾ ವರ್ಗಾವಣೆ ಮಾಡಬೇಕು. ಶಾಲೆಗಳಿಗೆ ಬಿಡುಗಡೆಯಾದ ಅನುದಾನದ ಬಳಕೆಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಕುರಿತು ಗುರುವಾರ ಸಲ್ಲಿಸಿದ ಮನವಿಯಲ್ಲಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಅಧೀನದಲ್ಲಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ವಿವಿಧ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು, ಸೂಕ್ತ ಭದ್ರತೆ ಹಾಗೂ ಅಗತ್ಯ ಮೂಲಸೌಕರ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರುಗಳಿವೆ ಎಂದು ಆರೋಪಿಸಲಾಗಿದೆ.

ವಸತಿ ಶಾಲೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ಸರ್ಕಾರ ಪ್ರತಿವರ್ಷ ಲಕ್ಷಾಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತಿದ್ದರೂ, ಕೆಲವು ಶಾಲೆಗಳಲ್ಲಿ ಅನುದಾನದ ಸಮರ್ಪಕ ಬಳಕೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ವಿದ್ಯಾರ್ಥಿಗಳೊಂದಿಗೆ ನೇರವಾಗಿ ಮಾತನಾಡಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಒತ್ತಾಯಿಸಲಾಗಿದೆ.

ವಸತಿ ಶಾಲೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಆರ್ಥಿಕವಾಗಿ ದುರ್ಬಲ ಕುಟುಂಬಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲೆಗಳಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸಿ, ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಹಲವು ವರ್ಷಗಳಿಂದ ಒಂದೇ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಮೇಲ್ವಿಚಾರಕರನ್ನು ನಿಯಮಾನುಸಾರ ಅಂತರ್‌ಜಿಲ್ಲಾ ವರ್ಗಾವಣೆ ಮಾಡಬೇಕು. ಕಳೆದ ಐದು ವರ್ಷಗಳಲ್ಲಿ ವಸತಿ ಶಾಲೆಗಳಿಗೆ ಬಿಡುಗಡೆಯಾದ ಅನುದಾನದ ಬಳಕೆಯ ಕುರಿತು ಜಿಲ್ಲಾ ಮಟ್ಟದ ತನಿಖಾ ತಂಡ ರಚಿಸಿ ಪರಿಶೀಲನೆ ನಡೆಸಬೇಕು. ಕಳಪೆ ಗುಣಮಟ್ಟದ ಆಹಾರ ನೀಡಿರುವುದು ತನಿಖೆಯಲ್ಲಿ ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಜಿಲ್ಲೆಯ ಎಲ್ಲ ವಸತಿ ಶಾಲೆಗಳ ನಿರ್ವಹಣೆ, ಆಹಾರದ ಗುಣಮಟ್ಟ, ಕುಡಿಯುವ ನೀರು, ಸ್ವಚ್ಛತೆ ಹಾಗೂ ಭದ್ರತೆಯನ್ನು ಪರಿಶೀಲಿಸಲು ವಿಶೇಷ ತಂಡ ರಚಿಸಬೇಕು. ಅನುದಾನ ದುರ್ಬಳಕೆಯಾಗಿರುವುದು ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್‌ನ ಜಿಲ್ಲಾ ಸಂಚಾಲಕ ಸಂದೀಪ್ ಕಾಂಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಮಾಲೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅನೀಲಕುಮಾರ್ ಮಡ್ಡೆ, ವಿನೋದ್ ಸಿಂಧೆ ಹಾಗೂ ಸಾಯಿ ಕೌರವ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor