Bidar | ವಿದ್ಯುತ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಮನವಿ
ಬೀದರ್: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹ ಸಮಿತಿಯು ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದೆ.
ಮನವಿಯಲ್ಲಿ ಅಲಿಯಂಬರ್, ಯರನಳ್ಳಿ, ಮಮದಾಪುರ್, ಬಂಪಳ್ಳಿ ಹಾಗೂ ಸಿದ್ದಾಪುರ್ ಗ್ರಾಮಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ದೂರಲಾಗಿದೆ. ನಿರಂತರ ವಿದ್ಯುತ್ ವ್ಯತ್ಯಯದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದ್ದು, ರಾತ್ರಿ ವೇಳೆ ಸಾರ್ವಜನಿಕರ ಸಂಚಾರಕ್ಕೂ ಸಮಸ್ಯೆ ಉಂಟಾಗುತ್ತಿದೆ ಎಂದು ತಿಳಿಸಲಾಗಿದೆ.
ಈ ಕುರಿತು ಹಲವು ಬಾರಿ ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಸಮಿತಿ, ಗ್ರಾಮಗಳಿಗೆ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಸರಬರಾಜು ಕಲ್ಪಿಸುವಂತೆ ಒತ್ತಾಯಿಸಿದೆ.
ಜೊತೆಗೆ ಜನವಾಡ ಹೋಬಳಿ ವ್ಯಾಪ್ತಿಯ ಜೆಸ್ಕಾಂ ಅಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕು. ಬೇಡಿಕೆಗಳನ್ನು ಈಡೇರಿಸದಿದ್ದರೆ ಜೆಸ್ಕಾಂ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಮಿತಿ ಎಚ್ಚರಿಕೆ ನೀಡಿದೆ.
ಈ ಸಂದರ್ಭದಲ್ಲಿ ಸಮಿತಿಯ ಕಲಬುರಗಿ ವಿಭಾಗೀಯ ಅಧ್ಯಕ್ಷ ಸಂಗಮೇಶ್ ಬಾವಿದೊಡ್ಡಿ, ಜಿಲ್ಲಾ ಘಟಕದ ಅಧ್ಯಕ್ಷ ವಿಶಾಲ್ ದೊಡ್ಡಿ, ಅಲಿಯಂಬರ್ ಗ್ರಾಮದ ಶೇಖ್, ಮಮದಾಪುರದ ಮಲ್ಲಿಕಾರ್ಜುನ್ ದೊಡ್ಡಮನಿ, ವೈಜಿನಾಥ್ ಖ್ಯಾಮ ಹಾಗೂ ಮಲ್ಲಿಕಾರ್ಜುನ್ ಗಾದಗಿ ಇದ್ದರು.