ಬೀದರ್ | ಮಾಂಜ್ರಾ ನದಿಗೆ ನೀರು ಹರಿಸಲು ಶಾಸಕ ಪ್ರಭು ಚವ್ಹಾಣ್ ಸೂಚನೆ
ಔರಾದ್ : ಮಾಂಜ್ರಾ ನದಿ ಬತ್ತಿ ಹೋಗಿರುವುದರಿಂದ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ಅಗತ್ಯ ಪ್ರಮಾಣದ ನೀರು ಹರಿಸುವಂತೆ ಶಾಸಕ ಪ್ರಭು ಚವ್ಹಾಣ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಾದ ಹಿನ್ನೆಲೆಯಲ್ಲಿ ಮಾಂಜ್ರಾ ನದಿ ಬತ್ತಿ ಹೋಗಿದೆ. ಹಾಲಹಳ್ಳಿಯಿಂದ ಔರಾದ್ ಪಟ್ಟಣಕ್ಕೆ ಅಗುವ ನೀರು ಸರಬರಾಜಿನಲ್ಲಿಯೂ ವ್ಯತ್ಯಯ ಉಂಟಾಗಿದ್ದು, ಎಲ್ಲ ವಾರ್ಡ್‌ಗಳಿಂದ ನಿರಂತರ ದೂರುಗಳು ಬರುತ್ತಿವೆ. ಜೊತೆಗೆ ನದಿ ವ್ಯಾಪ್ತಿಯ ಬಹಳಷ್ಟು ಗ್ರಾಮಗಳಲ್ಲಿ ನೀರಿನ ಕೊರತೆ ಎದುರಾಗಿದ್ದು, ಜನ-ಜಾನುವಾರುಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಹಾಗಾಗಿ ತುರ್ತಾಗಿ ನದಿಗೆ ನೀರು ಹರಿಸಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಅನುಕೂಲ ಮಾಡಿಕೊಡುವಂತೆ ಅವರು ನಿರ್ದೇಶನ ನೀಡಿದ್ದಾರೆ.
ಮಳೆ ಕೊರತೆಯಿಂದಾಗಿ ಈ ಬಾರಿ ಬೇಸಿಗೆ ಕಾಲದ ಮುನ್ನವೇ ಬರ ಪರಿಸ್ಥಿತಿ ಉಂಟಾಗಿದ್ದು, ಸಾಕಷ್ಟು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹಾಗೂ ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಕುರಿತು ದೂರು ನೀಡಿದಾಗ ನಿರ್ಲಕ್ಷ್ಯ ಮಾಡದೆ ತಕ್ಷಣ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಪಿಡಿಓಗಳ ಕಾರ್ಯವೈಖರಿಯನ್ನು ಪರಿಶೀಲಿಸುವುದರ ಜೊತೆಗೆ ಗ್ರಾಮಗಳಲ್ಲಿ ನೀರು ಪೂರೈಕೆಯ ಸ್ಥಿತಿಗತಿಗಳ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಜೆಜೆಎಂ ಯೋಜನೆ ನಿರೀಕ್ಷೆಗೆ ತಕ್ಕಂತೆ ಆಗದ ಹಿನ್ನೆಲೆಯಲ್ಲಿ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದಿರುವುದು ಕಂಡು ಬಂದಿದೆ. ಅಧಿಕಾರಿಗಳು ಸಮಸ್ಯೆ ಇರುವ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ, ನೀರು ಪೂರೈಕೆಯಲ್ಲಿನ ಅಡಚಣೆಗಳನ್ನು ಪರಿಶೀಲಿಸಿ, ತಕ್ಷಣ ಪರಿಹಾರ ಕಲ್ಪಿಸಬೇಕು. ಕೇವಲ ಕಚೇರಿಯಲ್ಲಿ ಕುಳಿತುಕೊಳ್ಳದೆ, ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಬೇಕು ಎಂದು ಅವರು ತಾಕೀತು ಮಾಡಿದ್ದಾರೆ.
ಬರ ಪರಿಸ್ಥಿತಿಯಿಂದ ಈಗಾಗಲೇ ರೈತರು ಹಾಗೂ ಗ್ರಾಮೀಣ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ತೊಂದರೆ ಉಂಟು ಮಾಡಬಾರದು. ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವುದು ಅಧಿಕಾರಿಗಳ ಮೊದಲ ಆದ್ಯತೆಯಾಗಬೇಕು. ಕುಡಿಯುವ ನೀರಿನ ವಿಷಯದಲ್ಲಿ ಜನರಿಗೆ ತೊಂದರೆಯಾದರೆ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.