Bidar | 37.50 ಕೋಟಿ ರೂ. ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಹೀಂ ಖಾನ್ ಚಾಲನೆ
ಬೀದರ್: ನಗರದ ಸಮಗ್ರ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಸುಧಾರಣೆಯ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮದ (ಸಿಎಂಐಡಿಪಿ) ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಹೀಂ ಖಾನ್ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀದರ್ ನಗರದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವುದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು ಹಾಗೂ ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಮತ್ತು ನಾಗರಿಕ ಸೌಲಭ್ಯಗಳನ್ನು ಒದಗಿಸುವುದು ತಮ್ಮ ಆದ್ಯತೆಯಾಗಿದೆ ಎಂದರು.
ನಗರದ ಪ್ರಮುಖ ರಸ್ತೆ ಸಂಪರ್ಕಗಳನ್ನು ಸುಧಾರಿಸುವ ಉದ್ದೇಶದಿಂದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕೇಂದ್ರ ಬಸ್ ನಿಲ್ದಾಣದಿಂದ ಹೆಣ್ಣುಮಗು ವೃತ್ತದವರೆಗೆ, ಅಕ್ಕಮಹಾದೇವಿ ಕಾಲೇಜಿನಿಂದ ಕೆಇಬಿ ಕಚೇರಿವರೆಗೆ ಹಾಗೂ ರೋಟರಿ ಸರ್ಕಲ್‌ನಿಂದ ಖಂಡ್ರೆ ಪೆಟ್ರೋಲ್ ಪಂಪ್‌ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ. ಈ ಕಾಮಗಾರಿಗಳಿಗೆ ಅಂದಾಜು 5 ಕೋಟಿ ರೂ. ವೆಚ್ಚವಾಗಲಿದ್ದು, ಒಟ್ಟು 37.50 ಕೋಟಿ ರೂ. ಮೊತ್ತದ ರಸ್ತೆ ಅಭಿವೃದ್ಧಿ ಪ್ಯಾಕೇಜ್‌ನ ಭಾಗವಾಗಿ ಇವುಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಈ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಂದ ನಗರದ ಸಂಚಾರ ವ್ಯವಸ್ಥೆ ಸುಧಾರಿಸುವುದರ ಜೊತೆಗೆ ಸಾರ್ವಜನಿಕರಿಗೆ ಸುಗಮ ಸಾರಿಗೆ ಸೌಲಭ್ಯ ದೊರೆಯಲಿದೆ. ಅಲ್ಲದೆ, ಬೀದರ್ ನಗರದ ಸಮಗ್ರ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮತ್ತಷ್ಟು ವೇಗ ದೊರೆಯಲಿದೆ. ನಗರದ ಅಭಿವೃದ್ಧಿಯೇ ನಮ್ಮ ಸಂಕಲ್ಪವಾಗಿದ್ದು, ಜನರಿಗೆ ಉತ್ತಮ ಮೂಲಸೌಕರ್ಯ ಒದಗಿಸುವುದೇ ನಮ್ಮ ಬದ್ಧತೆಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.