Bidar | ಸಮಯಕ್ಕೆ ಸರಿಯಾಗಿ ಕಚೇರಿಗೆ ಹಾಜರಾಗಬೇಕು : ಜಿಪಂ ಸಿಇಒ ಗಿತ್ತೆ ಮಾಧವ್ ಸೂಚನೆ
ಮದನೂರ್ ಗ್ರಾಮ ಪಂಚಾಯತ್ಗೆ ಸಿಇಒ ಭೇಟಿ : ವಿವಿಧ ಕಾಮಗಾರಿ ಪರಿಶೀಲನೆ
ಬೀದರ್: ಕಮಲನಗರ ತಾಲೂಕಿನ ಮದನೂರ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಅವರು ಸೋಮವಾರ ಭೇಟಿ ನೀಡಿ, ಪಂಚಾಯಿತಿಯಲ್ಲಿ ಪಿಡಿಒ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಎಲ್ಲ ಸಿಬ್ಬಂದಿಯೂ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಬೇಕು ಎಂದು ಸೂಚಿಸಿದರು.
ಮದನೂರ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಮಕ್ಕಳಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರ, ಕಲಿಕಾ ಸಾಮಗ್ರಿಗಳು ಹಾಗೂ ಕೇಂದ್ರದಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ನಂತರ ಗ್ರಾಮದ ಗ್ರಂಥಾಲಯಕ್ಕೆ ಭೇಟಿ ನೀಡಿ, ಕಟ್ಟಡ ಹಾಗೂ ಗ್ರಂಥಾಲಯದಲ್ಲಿ ಸಮರ್ಪಕ ವ್ಯವಸ್ಥೆಗಳಿಲ್ಲದಿರುವುದನ್ನು ಗಮನಿಸಿದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಗ್ರಾಮೀಣ ಭಾಗದ ಜನರು ಹಾಗೂ ವಿದ್ಯಾರ್ಥಿಗಳಿಗೆ ಓದು ಮತ್ತು ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಖತಗಾಂವ್ ಗ್ರಾಮದಲ್ಲಿ ನಡೆಯುತ್ತಿದ್ದ ಸಿಸಿಟಿ ಕಾಮಗಾರಿಯನ್ನು ವೀಕ್ಷಿಸಿದ ಅವರು, ಸ್ಥಳದಲ್ಲೇ ಸ್ವತಃ ಮಣ್ಣು ಅಗೆದು ಬುಟ್ಟಿಗೆ ತುಂಬುವ ಮೂಲಕ ಕೂಲಿ ಕಾರ್ಮಿಕರಿಗೆ ಉತ್ತೇಜನ ನೀಡಿದರು.
ಈ ವೇಳೆ ಕೂಲಿ ಕಾರ್ಮಿಕರೊಂದಿಗೆ ಕಾಮಗಾರಿ ಕುರಿತು ಚರ್ಚಿಸಿದ ಅವರು, ಕೆಲವು ತಾಂತ್ರಿಕ ಸಮಸ್ಯೆಗಳಿಂದ ಕೂಲಿ ಪಾವತಿ ತಡವಾಗಿತ್ತು. ಇದೀಗ ಸಮಸ್ಯೆ ಬಗೆಹರಿದಿದ್ದು, ಎಲ್ಲರಿಗೂ ಸಮಯಕ್ಕೆ ಸರಿಯಾಗಿ ಕೂಲಿ ಪಾವತಿಸಲಾಗುವುದು ಎಂದು ತಿಳಿಸಿದರು. ಹೆಚ್ಚಿನ ಜನರನ್ನು ಕೂಲಿ ಕೆಲಸಕ್ಕೆ ಕರೆತರಬೇಕು. ಕೂಲಿ ಪಾವತಿ ಕುರಿತು ಯಾವುದೇ ಆತಂಕ ಪಡಬೇಡಿ, ಸಮಯಕ್ಕೆ ಸರಿಯಾಗಿ ಕೂಲಿ ನೀಡಲಾಗುವುದು ಎಂದು ಭರವಸೆ ನೀಡಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೂ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಊಟದ ಗುಣಮಟ್ಟ, ಕುಡಿಯುವ ನೀರು, ಶೌಚಾಲಯ ಹಾಗೂ ಮೂಲಸೌಕರ್ಯಗಳ ಸ್ವಚ್ಛತೆಯನ್ನು ಪರಿಶೀಲಿಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅವರ ಶೈಕ್ಷಣಿಕ ಪ್ರಗತಿ ಹಾಗೂ ವಸತಿ ನಿಲಯದಲ್ಲಿನ ಸೌಲಭ್ಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಣಮಂತರಾಯ ಕೌಟಗೆ, ಪಿಡಿಒ ಅನಿತಾ, ಡಿಇಒ ಮಹೇಶ್, ಕರ ವಸೂಲಿಗಾರ ರಾಹುಲ್, ಟಿಎ ವಿರೂಪಾಕ್ಷ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.