Bidar | ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ ರಾಷ್ಟ್ರಪತಿ ಮಧ್ಯಪ್ರವೇಶಿಸಲಿ: ಓಂಪ್ರಕಾಶ್ ರೊಟ್ಟಿ ಏಕಾಂಗಿ ಪ್ರತಿಭಟನೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ; ರಾಷ್ಟ್ರಪತಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ
ಬೀದರ್: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಕಳೆದ 19 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಹೋರಾಟ ಅಂತ್ಯಗೊಳಿಸಲು ರಾಷ್ಟ್ರಪತಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಓಂಪ್ರಕಾಶ್ ರೊಟ್ಟಿ ಅವರು ಶುಕ್ರವಾರ ಏಕಾಂಗಿ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಅವರು, ಶಿಕ್ಷಣ ತಜ್ಞ, ಪರಿಸರ ಹೋರಾಟಗಾರ ಹಾಗೂ ಲಡಾಖ್ ಜನರ ಹಕ್ಕುಗಳ ಪರ ಹೋರಾಡುತ್ತಿರುವ ಸೋನಂ ವಾಂಗ್ಚುಕ್ ಅವರು ಸರ್ಕಾರದ ವೈಫಲ್ಯಗಳನ್ನು ವಿರೋಧಿಸಿ 19 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ಸ್ಪಂದನೆ ನೀಡದೇ ಬೇಜವಾಬ್ದಾರಿ ತೋರಿದೆ ಎಂದು ಆರೋಪಿಸಿದರು.
ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಗಾಗಿ ನಡೆಯುತ್ತಿರುವ ಈ ಹೋರಾಟದ ಸ್ಥಳಕ್ಕೆ ಪ್ರಧಾನಿ ಅಥವಾ ಕೇಂದ್ರ ಗೃಹ ಸಚಿವರು ಭೇಟಿ ನೀಡದಿರುವುದು ವಿಷಾದನೀಯ. ರಾಷ್ಟ್ರಪತಿಗಳು ತಕ್ಷಣ ಮಧ್ಯಸ್ಥಿಕೆ ವಹಿಸಿ, ಸೋನಂ ವಾಂಗ್ಚುಕ್ ಅವರೊಂದಿಗೆ ಸಂವಾದ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಅವರ ಬೇಡಿಕೆಗಳ ಕುರಿತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಪ್ರತಿಭಟನೆಯ ಬಳಿಕ ಓಂಪ್ರಕಾಶ್ ರೊಟ್ಟಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿದರು.