ಬೀದರ್ | ಪಂಚ ಗ್ಯಾರಂಟಿ ಯೋಜನೆಗಳಿಂದ ಜನರು ಆರ್ಥಿಕವಾಗಿ ಸಬಲರಾಗಿದ್ದಾರೆ : ಅಮೃತರಾವ್ ಚಿಮಕೋಡೆ
ಬೀದರ್ : ಪಂಚ ಗ್ಯಾರಂಟಿ ಯೋಜನೆಗಳಿಂದ ಜನರು ಆರ್ಥಿಕವಾಗಿ ಸಬಲರಾಗಲು ಅನುಕೂಲವಾಗಿದೆ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರು ಹೇಳಿದರು.
ಇಂದು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಂದಿನಿಂದ ಜು.12 ರವರೆಗೆ ಮೂರು ದಿನಗಳ ಕಾಲ ಏರ್ಪಡಿಸಿರುವ ರಾಜ್ಯ ಸರಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರೊಂದಿಗೆ ಜಂಟಿಯಾಗಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಮತ್ತು ಶಕ್ತಿ ಯೋಜನೆ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ವಿಶೇಷವಾಗಿ ಬಡವರು, ಕೂಲಿ ಕಾರ್ಮಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಉಚಿತ ಬಸ್ ಪ್ರಯಾಣದಿಂದ ಮಹಿಳೆಯರು ಧಾರ್ಮಿಕ ಸ್ಥಳಗಳಿಗೆ ಮತ್ತು ಪ್ರವಾಸಿತಾಣಗಳಿಗೆ ಭೇಟಿ ನೀಡುತ್ತಿದ್ದಾರೆ. ಮಹಿಳೆಯರಿಗೆ ಕುಟುಂಬ ನಿರ್ವಹಣೆಗೆ ತುಂಬಾ ಅನುಕೂಲವಾಗಿದೆ ಎಂದರು.
ಜಿಲ್ಲೆಯಲ್ಲಿ ಜೂನ್ 2023 ರಿಂದ ಇಂದಿನವರೆಗೆ 8 ಕೋಟಿ 64 ಲಕ್ಷ ಮಹಿಳೆಯರು ಶಕ್ತಿ ಯೋಜನೆಯಡಿ ಲಾಭ ಪಡೆದಿದ್ದಾರೆ. ಇದರಿಂದ 248 ಕೋಟಿ 79 ಲಕ್ಷ ರೂ. ಮೊತ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸಂದಾಯವಾಗಿದೆ. ಅನ್ನಭಾಗ್ಯಯೋಜನೆಯಡಿ ಜನವರಿ 2025 ರವರೆಗೆ ಪ್ರತಿ ಫಲಾನುಭವಿಗಳಿಗೆ 5 ಕೆ.ಜಿ. ಅಕ್ಕಿ ಹಾಗೂ 5 ಕೆ.ಜಿ. ಯ ನಗದು ಹಣ ವರ್ಗಾವಣೆ ಮಾಡಲಾಗಿದೆ. ಫೆಬ್ರವರಿ 2025 ರಿಂದ ಪ್ರತಿ ಫಲಾನುಭವಿಗಳಿಗೆ 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಯುವನಿಧಿ ಯೋಜನೆಯಡಿ ಇಲ್ಲಿಯವರೆಗೆ ಡಿಪ್ಲೋಮಾ ಹಾಗೂ ಪದವೀದರ ನಿರುದ್ಯೋಗ ಯುವಕರಿಗೆ 20 ಕೋಟಿ 97 ಲಕ್ಷ ರೂ. ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 35 ಲಕ್ಷ 4 ಸಾವಿರದ 79 ಫಲಾನುಭವಿಗಳು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಇದರಿಂದ ಒಟ್ಟು 341 ಕೋಟಿ 46 ಲಕ್ಷ ರೂ. ಜೇಸ್ಕಾಂಗೆ ಸಂದಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3 ಲಕ್ಷ 60 ಸಾವಿರ ಮಹಿಳೆಯರು ಲಾಭ ಪಡೆಯುತ್ತಿದ್ದು, ಮೇ 2025 ರ ಅಂತ್ಯದವರೆಗೆ 1,268 ಕೋಟಿ ರೂ. ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ರಾಜ್ಯ ಸರ್ಕಾರವು ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ವೀಕ್ಷಿಸಿ ಅವುಗಳು ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದ ಅವರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ನಿರ್ಮಿಸಿದ ಹೆಣ್ಣು ಮಕ್ಕಳ ವಿಶ್ರಾಂತಿ ಕೋಣೆ ಹಾಗೂ ಮಗುವಿಗೆ ಹಾಲುಣಿಸುವ ಕೋಣೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ್ ಫುಲೇಕರ್, ವಿಭಾಗೀಯ ಸಂಚಾರಿ ಅಧಿಕಾರಿ ಇಂದ್ರಸೇನ್ ಎಂ.ಬಿರಾದಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಶ್ರೀಧರ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪ್ರವೀಣ್ ಬರಗಲ್, ಜೇಸ್ಕಾಂನ ಕಾರ್ಯಪಾಲಕ ಅಭಿಯಂತರ ರಮೇಶ್ ಪಾಟೀಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಸುಳ್ಳೊಳ್ಳಿ, ವಿಜಯಕೃಷ್ಣ ಸೋಲಪೂರ್, ನರೇಶಕುಮಾರ್, ಆಶೀಷ್, ತನ್ವೀರ್ ಇಕ್ಬಾಲ್ ಹಾಗೂ ನಾಗಶೆಟ್ಟಿ ಸೇರಿದಂತೆ ಉದ್ಯೋಗ ವಿನಿಮಿಯ ಇಲಾಖೆಯ ಅಧಿಕಾರಿ, ಸಾರಿಗೆ ಇಲಾಖೆಯ ಅಧಿಕಾರಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.