×
Ad

ಬೀದರ್ | ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ಸಿದ್ಧತೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Update: 2026-01-13 20:28 IST

ಬೀದರ್: ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೀಪಾಲಂಕಾರ : ಗಣರಾಜ್ಯೋತ್ಸವದ ನಿಮಿತ್ತ ಜ. 25 ಮತ್ತು 26ರಂದು ಎಲ್ಲಾ ಸರ್ಕಾರಿ ಕಚೇರಿಗಳು, ಸಂಘ-ಸಂಸ್ಥೆಗಳು ಹಾಗೂ ಪ್ರಮುಖ ಮಹನೀಯರ ವೃತ್ತಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲು ಸೂಚಿಸಲಾಯಿತು.

ಧ್ವಜಾರೋಹಣ : ಜ.26ರ ಬೆಳಿಗ್ಗೆ 8 ಗಂಟೆಗೆ ಎಲ್ಲಾ ಶಾಲಾ-ಕಾಲೇಜು ಮತ್ತು ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. ನಂತರ ಬೆಳಿಗ್ಗೆ 9 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ.

ಪಥ ಸಂಚಲನ : ಕ್ರೀಡಾಂಗಣದಲ್ಲಿ ನಡೆಯುವ ಪಥ ಸಂಚಲನ ಮತ್ತು ಶಾಲಾ ಮಕ್ಕಳ ಕವಾಯತು ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ರಚಿಸಲಾದ ಉಪ ಸಮಿತಿಗಳಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ಅಂದು ಸಂಜೆ 5:30ಕ್ಕೆ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕವಿಗೋಷ್ಠಿಯನ್ನು ಹಮ್ಮಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಬೀದರ್ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಸಹಾಯಕ ಆಯುಕ್ತ ಮೊಹಮ್ಮದ್ ಶಕೀಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News