ಬೀದರ್ | ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆ
ಬೀದರ್ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸೋಣ. ಅಂದಿನ ದಿನ ಎಲ್ಲಾ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಯಶಸ್ವಿ ಮಾಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣರಾಜ್ಯೋತ್ಸವ ನಿಮಿತ್ತ ಜ.25 ಮತ್ತು 26 ರಂದು ಸಂಘ ಸಂಸ್ಥೆಗಳು, ಸರಕಾರಿ ಕಚೇರಿಗಳು ಎಲ್ಲಾ ಮಹನಿಯರ ವೃತ್ತದ ಮೇಲೆ ದೀಪಲಾಂಕಾರ ಮಾಡುವುದು. ಜ.26 ರ ಬೆಳಿಗ್ಗೆ 8 ಗಂಟೆಗೆ ಸರಕಾರಿ -ಅರೆ ಸರಕಾರಿ, ವಿವಿಧ ಶಾಲಾ ಕಾಲೇಜು ಮತ್ತು ಸಂಘ-ಸಂಸ್ಥೆಗಳ ಮೇಲೆ ಧ್ವಜಾರೋಹಣ ನೆರವೇರಿಸಿ ನಂತರ ಎಲ್ಲಾ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಬೆಳಿಗ್ಗೆ 8:45 ಗಂಟೆಯೊಳಗೆ ಹಾಜರಾಗಬೇಕು ಎಂದು ಸೂಚಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮುಂಚಿತವಾಗಿ ಪ್ರಬಂಧ ಸ್ಪರ್ಧೆ, ರಂಗೋಲಿ ಸ್ಪರ್ಧೆ ಏರ್ಪಡಿಸಬೇಕು. ಅಂದು ಬೆಳಿಗ್ಗೆ 9 ಗಂಟೆಗೆ ಬೀದರ್ ನಗರದ ನೆಹರು ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಗುವುದು. ನೆಹರು ಕ್ರೀಡಾಂಗಣದಲ್ಲಿ ಜರುಗುವ ಪಥ ಸಂಚಲನ, ಶಾಲಾ ಮಕ್ಕಳಿಂದ ಕವಾಯತು ಕಾರ್ಯಕ್ರಮಗಳನ್ನು ನಿಯಮಾನುಸಾರ ಅಚ್ಚು ಕಟ್ಟಾಗಿ ನೆರವೇರಿಸಬೇಕು ಎಂದು ಉಪ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರಿಗೆ ತಿಳಿಸಿದರು.
ಶಿಕ್ಷಣ ಇಲಾಖೆ ವತಿಯಿಂದ ಮೂರು ಸರಕಾರಿ, ಎರಡು ಖಾಸಗಿ ಶಾಲಾ-ಕಾಲೇಜುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ವ್ಯವಸ್ಥೆ ಮಾಡಬೇಕು. ಗಣರಾಜ್ಯೋತ್ಸವ ಅಂಗವಾಗಿ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಸಂಜೆ 5:30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕವಿಗೋಷ್ಠಿ ಹಮ್ಮಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರ್, ಸಹಾಯಕ ಆಯುಕ್ತ ಎಂ.ಡಿ.ಶಕೀಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮುತ್ತಣ್ಣ ಕರಿಗಾರ್, ಸಂಘ-ಸಂಸ್ಥೆ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.