ಬೀದರ್‌ : ಜಿಲ್ಲೆಯಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಅಧಿಕಾರಿಗಳು 24 ಗಂಟೆಯೊಳಗಾಗಿ ಇತ್ಯರ್ಥಪಡಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚಿಸಿದರು.‌

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬರ ಪರಿಸ್ಥಿತಿ, ಕುಡಿಯುವ ನೀರು, ಇ-ಸ್ವತ್ತು ಹಾಗೂ ವಿಬಿ-ಜಿ ರಾಮ್ ಜೀ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಪ್ರತಿಯೊಂದು ಗ್ರಾಮಕ್ಕೂ ಖುದ್ದಾಗಿ ಭೇಟಿ ನೀಡಿ, ಕುಡಿಯುವ ನೀರಿನ ಅಭಾವ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನೀರು ಪೂರೈಕೆಯಂತಹ ಅತ್ಯಗತ್ಯ ಸೇವೆಯಲ್ಲಿ ಕರ್ತವ್ಯಲೋಪ ಎಸಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಬಿ-ಜಿ ರಾಮ್ ಜೀ ಯೋಜನೆಯಡಿ ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರಿಗೆ ಸ್ಥಳೀಯವಾಗಿಯೇ ಉದ್ಯೋಗ ಹಾಗೂ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿ ಗರಿಷ್ಠ ಪ್ರಮಾಣದಲ್ಲಿ ಕಾಮಗಾರಿಗಳನ್ನು ಸೃಜಿಸಿ ಕೂಲಿ ಕಾರ್ಮಿಕರಿಗೆ ನಿಗದಿತ ಅವಧಿಯಲ್ಲಿ ವೇತನ ಪಾವತಿಸಬೇಕು. ಯಾವುದೇ ತರಹದ ಅಕ್ರಮಗಳಿಗೆ ಆಸ್ಪದ ನೀಡದೇ ನಿಗದಿತ ಸಮಯದಲ್ಲಿ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಬೇಕು. ಬೀದರ್ ಜಿಲ್ಲೆಯು ಗಡಿಭಾಗದಲ್ಲಿರುವ ಕಾರಣ ಜಿಲ್ಲೆಯಿಂದ ಕೂಲಿ ಕಾರ್ಮಿಕರು ಕೆಲಸಕ್ಕಾಗಿ ನೆರೆ ರಾಜ್ಯಗಳಿಗೆ ವಲಸೆ ಹೋಗುವುದನ್ನು ತಡೆಯಲು ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ಜಿಲ್ಲೆಯ ವಿವಿಧೆಡೆ ವಿದ್ಯುತ್ ತಂತಿಗಳು ಅಪಾಯಕಾರಿ ಹಂತದಲ್ಲಿದ್ದು, ಸರಣಿ ಅಪಘಾತ ಹಾಗೂ ಸಾವು-ನೋವುಗಳಿಗೆ ಕಾರಣವಾಗುತ್ತಿವೆ. ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು, ವಿದ್ಯುತ್ ಕಂಬ ಮತ್ತು ತಂತಿಗಳಿಂದ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯ ಪ್ರತಿಯೊಂದು ಗ್ರಾಮೀಣ ಪ್ರದೇಶಕ್ಕೂ ಬಸ್ ಸಂಚಾರ ಸಮರ್ಪಕವಾಗಿರಬೇಕು. ಯಾವುದೇ ಹಳ್ಳಿಯಿಂದಲೂ ಬಸ್ ಬರುತ್ತಿಲ್ಲ ಎಂಬ ದೂರುಗಳು ಕೇಳಿಬರದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಈ ಸಭೆಯಲ್ಲಿ ಶಾಸಕ ರಹೀಂ ಖಾನ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಂದೀಪ್ ಡಿ., ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬದೋಲೆ, ಎಸ್ಪಿ ಪ್ರದೀಪ್ ಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor