ಬೀದರ್| ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ
ಬಸವಕಲ್ಯಾಣ : ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಎನ್‌ಟಿಎ ರದ್ದುಪಡಿಸಲು ಮತ್ತು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ವಿದ್ಯಾರ್ಥಿಗಳು ಕಾಲ್ನಡಿಗೆಯ ಮುಖಾಂತರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಉದ್ದಕ್ಕೂ ಎನ್ ಟಿಎ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ತಹಶೀಲ್ದಾರ್ ಮೂಲಕ ಪ್ರಧಾನಿಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ತಾಲೂಕಾಧ್ಯಕ್ಷ ನರಸಪ್ಪಾ ನಿರೋಡೆ ಅವರು ಮಾತನಾಡಿ, ಇತ್ತೀಚೆಗೆ ದೇಶಾದ್ಯಂತ ನಡೆದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾಡಿದ ದೊಡ್ಡ ಅನ್ಯಾಯವಾಗಿದೆ. ಈ ಘಟನೆಯು ದೇಶದ ಶಿಕ್ಷಣ ವ್ಯವಸ್ಥೆ ಮತ್ತು ಪರೀಕ್ಷಾ ಮಂಡಳಿಗಳ ಮೇಲಿನ ನಂಬಿಕೆಗೆ ಅಡ್ಡಿಯುಂಟು ಮಾಡಿದೆ ಎಂದು ಆರೋಪಿಸಿದರು.
ಎನ್‌ಟಿಎ ಸಂಸ್ಥೆಯು ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುವಲ್ಲಿ ಸತತವಾಗಿ ವಿಫಲವಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಭ್ರಷ್ಟ ವ್ಯವಸ್ಥೆಯ ವಿರುದ್ಧ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಆದ್ದರಿಂದ, ವಿದ್ಯಾರ್ಥಿ ಹಕ್ಕುಗಳ ರಕ್ಷಣೆ ಹಾಗೂ ನ್ಯಾಯ ದೊರಕಿಸುವ ಉದ್ದೇಶದಿಂದ, ಎನ್‌ಟಿಎ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿಯವರು ಈ ಗಂಭೀರ ಸಮಸ್ಯೆಯನ್ನು ತಕ್ಷಣವೇ ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಜಯ್ ಗುಡ್ಡೆ, ರೆವಣಸಿದ್ದ ಹಲಿಂಗೆ, ರಾಘವೇಂದ್ರ ಖಾನಾಪುರೆ, ಸುನಿಲ್ ಸಿಂಧೆ, ವಿಶಾಲ್ ಮಳಗೊಂಡ, ಓಂಪ್ರಕಾಶ್ ಮಡಿವಾಳ್, ಆನಂದ್ ನಿರೋಡೆ, ಚೆತನ್ ಪಂಚಾಳ್ ಹಾಗೂ ಶ್ಯಾಮಸುಂದರ್ ಸಜ್ಜನ್ ಸೇರಿದಂತೆ ಹಲವರಿದ್ದರು.