ಬೀದರ್: ಅಮಲಾಪುರ ಗ್ರಾಮದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸ್ಮಶಾನ ಭೂಮಿಯ ಪಹಣಿಯಲ್ಲಿ (ಆರ್‌ಟಿಸಿ) ಸ್ಮಶಾನ ಭೂಮಿ ಎಂದು ನಮೂದಿಸಿ ಮಂಜೂರಾತಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಗುರುವಾರ 10ನೇ ದಿನಕ್ಕೆ ಕಾಲಿಟ್ಟಿದೆ.

ಧರಣಿ ಸ್ಥಳಕ್ಕೆ ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಭೇಟಿ ನೀಡಿ ಗ್ರಾಮಸ್ಥರು ಹಾಗೂ ದಲಿತ ಸಂಘಟನೆಗಳ ಮುಖಂಡರೊಂದಿಗೆ ಸ್ಮಶಾನ ಭೂಮಿ ಸಮಸ್ಯೆ ಕುರಿತು ಚರ್ಚಿಸಿದರು.

ಬಳಿಕ ಮಾತನಾಡಿದ ಅವರು, ಜಿಲ್ಲಾಧಿಕಾರಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಶೀಘ್ರ ಬಗೆಹರಿಸುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು. ಜೊತೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಗಮನಕ್ಕೂ ವಿಷಯ ತಂದು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಅಮಲಾಪುರ ಗ್ರಾಮದ ಪರಿಶಿಷ್ಟ ಜಾತಿ ಸಮುದಾಯ ಹಲವು ವರ್ಷಗಳಿಂದ ಬಳಸುತ್ತಿರುವ ಸ್ಮಶಾನ ಭೂಮಿಯನ್ನು ಅಧಿಕೃತವಾಗಿ ಪಹಣಿಯಲ್ಲಿ ದಾಖಲಿಸಿ, ಶಾಶ್ವತ ಹಕ್ಕು ನೀಡಬೇಕು ಎಂದು ಗ್ರಾಮಸ್ಥರು ಕಳೆದ ಹತ್ತು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ.

ಧರಣಿಯ 10ನೇ ದಿನವೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ, ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor