×
Ad

ಬೀದರ್ | ಜೆಸ್ಕಾಂ ಇಂಜಿನಿಯರ್ ರನ್ನು ಅಮಾನತುಗೊಳಿಸಲು ಒತ್ತಾಯಿಸಿ ಧರಣಿ

Update: 2026-01-06 23:13 IST

ಬೀದರ್ : ಜಿಲ್ಲೆಯ ಜೆಸ್ಕಾಂ ಅಧೀಕ್ಷಕ ಇಂಜಿನಿಯರ್ ವೀರಭದ್ರಪ್ಪ ಶಾಲಿಮನಿ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಮೇಶ್ ಪಾಟೀಲ್ ಅವರು ಗುತ್ತಿಗೆದಾರರೊಂದಿಗೆ ಕೈಜೋಡಿಸಿ ಸರ್ಕಾರದ ಕೋಟ್ಯಾಂತರ ಹಣವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು. ಜೊತೆಗೆ ಸಂಬಂಧಿಸಿದ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಅವರ ಪರವಾನಗಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಜಾಶಕ್ತಿ ಸಮಿತಿ ವತಿಯಿಂದ ಮಂಗಳವಾರ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ನಗರದ ಜೆಸ್ಕಾಂ ಕಚೇರಿ ಎದುರು ನಡೆದ ಧರಣಿಯಲ್ಲಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರದಲ್ಲಿ, ಜೆಸ್ಕಾಂ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸೇರಿಕೊಂಡು ಬೀದರ್ ತಾಲೂಕಿನ ಖಾಸಗಿ ಲೇಔಟ್ ಮಾಲೀಕರಿಂದ ವಿದ್ಯುತ್ ಕಂಬಗಳ ಅಳವಡಿಕೆಗೆ ಚಲನ್ ಮುಖಾಂತರ ಹಣ ಪಾವತಿ ಪಡೆದಿದ್ದರೂ, ಖಾಸಗಿ ಕಂಬ ಹಾಗೂ ಟ್ರಾನ್ಸ್‌ಫಾರ್ಮರ್ (ಟಿ.ಸಿ) ಅಳವಡಿಸದೇ, ಸರ್ಕಾರದ ಕಂಬಗಳು ಹಾಗೂ ಸರ್ಕಾರಿ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಿ ಸರ್ಕಾರದ ಕೋಟ್ಯಾಂತರ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಮೇಲಾಧಿಕಾರಿಗಳಿಗೆ ದೂರು ನೀಡಿದರೂ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಇದರಿಂದ ಮೇಲಾಧಿಕಾರಿಗಳೂ ಈ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಜೊತೆಗೆ ಅಕ್ರಮದಲ್ಲಿ ಭಾಗಿಯಾದ ಗುತ್ತಿಗೆದಾರರ ಪರವಾನಗಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಲಾಗಿದೆ.

ಈ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದ ಮುಂದೆ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಜಾಶಕ್ತಿ ಸಮಿತಿಯ ಜಿಲ್ಲಾಧ್ಯಕ್ಷ ಸಾಯಿ ಶಿಂಧೆ, ಉಪಾಧ್ಯಕ್ಷ ಮಹೇಂದ್ರಕುಮಾರ್ ಹೊಸಮನಿ, ಗುರು ನೇಮತಾಬಾದ್, ರಾಜಕುಮಾರ್ ಗುಮ್ಮೆ, ಶಿವಕುಮಾರ್, ಆಕಾಶ್ ತ್ರಿಮೂಖೆ, ಧನರಾಜ್ ಮೇತ್ರೆ ಸೇರಿದಂತೆ ಅನೇಕರು ಧರಣಿಯಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News