Bidar | ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

Update: 2026-07-20 16:29 IST

ಬೀದರ್: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಹಾಗೂ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಸೋಮವಾರ ಪ್ರತಿಭಟನೆ ನಡೆಸಿತು.

ನಗರದ ಅಂಬೇಡ್ಕರ್ ವೃತ್ತದಿಂದ ಭಗತ್ ಸಿಂಗ್ ವೃತ್ತದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ದೇಶದಲ್ಲಿ ಶಿಕ್ಷಣವು ಫೆಡರಲ್ ವ್ಯವಸ್ಥೆಯಡಿ ರಾಜ್ಯಗಳ ವ್ಯಾಪ್ತಿಯ ವಿಷಯವಾಗಿದ್ದರೂ, ಕೇಂದ್ರ ಸರ್ಕಾರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)ಯನ್ನು ಜಾರಿಗೊಳಿಸಿ ರಾಜ್ಯಗಳ ಅಧಿಕಾರವನ್ನು ಮೊಟಕುಗೊಳಿಸಿದೆ ಎಂದು ಆರೋಪಿಸಲಾಗಿದೆ. ಇತ್ತೀಚಿನ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಸುಮಾರು 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರಲಾಗಿದೆ.

ನೀಟ್ ಅಕ್ರಮಗಳನ್ನು ಖಂಡಿಸಿ ಸಿಜೆಪಿ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ವಿಜ್ಞಾನಿ ಹಾಗೂ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಉಪವಾಸ ಸತ್ಯಾಗ್ರಹದ ವೇಳೆ ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿರುವ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ಪೊಲೀಸ್ ಬಲ ಬಳಸಿ ಹೋರಾಟವನ್ನು ಹತ್ತಿಕ್ಕಲು ಯತ್ನಿಸಿದೆ ಎಂದು ದೂರಿದ ಪ್ರತಿಭಟನಾಕಾರರು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಅಧಿಕಾರದ ವಿಕೇಂದ್ರೀಕರಣದ ತತ್ವದಂತೆ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳ ಬದಲು ರಾಜ್ಯಗಳಿಗೆ ಸ್ವತಂತ್ರವಾಗಿ ಅರ್ಹತಾ ಪರೀಕ್ಷೆಗಳನ್ನು ನಡೆಸುವ ಅಧಿಕಾರ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಜಗದೀಶ್ವರ್ ಬಿರಾದಾರ್, ಮಹೇಶ್ ಗೋರನಾಳಕ‌ರ್, ಶ್ರೀಕಾಂತ್ ಸ್ವಾಮಿ, ಬಾಬುರಾವ್ ಹೊನ್ನಾ, ರಾಜಕುಮಾರ್ ಮೂಲಭಾರತಿ, ವಿನಯಕುಮಾರ್ ಮಾಳಗೆ, ವಿಠಲದಾಸ್ ಪ್ಯಾಗೆ, ಓಂಪ್ರಕಾಶ್ ರೊಟ್ಟೆ, ಮುಬಶೀರ್ ಸಿಂಧೆ, ಕೊಂಡಿಬಾರಾವ್ ಪಾಂಡ್ರೆ, ಯೋಗೇಶ್ ಪಾಟೀಲ್, ಗಣೇಶ್ ಬಿರಾದಾರ್, ಸಿದ್ದು ಪುಲಾರಿ, ಪ್ರಕಾಶ್ ರಾವಣ, ಸಿದ್ದು ಶೇಟಕಾರ್ ಹಾಗೂ ನಿಜಾಮುದ್ದೀನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News