Bidar | ಆರೋಗ್ಯ ಕೇಂದ್ರದ ಶುಶ್ರೂಷಕಿ ವರ್ಗಾವಣೆ, ಡಿಎಚ್ಒ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ
ಬೀದರ್: ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನಲಾದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್ಒ) ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಜನವಾಡಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಭಾಗ್ಯಲಕ್ಷ್ಮಿ ಅವರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಅಹಿಂದ್ ಸಂಘಟನೆಯ ವತಿಯಿಂದ ಸೋಮವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಎದುರು ಧರಣಿ ನಡೆಸಿದ ಸಂಘಟನೆಯ ಕಾರ್ಯಕರ್ತರು, ಡಿಎಚ್ಒ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಜಿಲ್ಲಾಧಿಕಾರಿಗಳ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಬೀದರ್ ತಾಲೂಕಿನ ಜನವಾಡಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಭಾಗ್ಯಲಕ್ಷ್ಮಿ ಅವರು ಆರೋಗ್ಯ ಕೇಂದ್ರಕ್ಕೆ ಬರುವ ಗರ್ಭಿಣಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಗರ್ಭಿಣಿಯರಿಗೆ ಹೊಟ್ಟೆ ನೋವು ಕಾಣಿಸಿಕೊಂಡರೂ ಸಕಾಲದಲ್ಲಿ ಹೆರಿಗೆ ಮಾಡಿಸದೆ, ಗರ್ಭಿಣಿಯರು ಹಾಗೂ ಮಕ್ಕಳ ಜೀವದೊಂದಿಗೆ ಆಟವಾಡುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿತ್ತು. ಅದರಂತೆ ಡಿಎಚ್ಒ ಅವರು ಭಾಗ್ಯಲಕ್ಷ್ಮಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು. ಆದರೆ, ಕೆಲವೇ ದಿನಗಳ ಬಳಿಕ ಡಿಎಚ್ಒ ಅವರೇ ವರ್ಗಾವಣೆ ಆದೇಶವನ್ನು ರದ್ದುಗೊಳಿಸಿದ್ದಾರೆ. ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಸರ್ಕಾರಿ ಸೇವೆಯಲ್ಲಿ ಬೇಜವಾಬ್ದಾರಿಯಿಂದ ಹಾಗೂ ಮನಬಂದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ದೂರಲಾಗಿದೆ.
ಗರ್ಭಿಣಿಯರು ಮತ್ತು ಚಿಕ್ಕ ಮಕ್ಕಳ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿರುವ ಶುಶ್ರೂಷಕಿ ಭಾಗ್ಯಲಕ್ಷ್ಮಿ ಅವರನ್ನು ಕೂಡಲೇ ವರ್ಗಾವಣೆಗೊಳಿಸಬೇಕು. ವರ್ಗಾವಣೆ ಆದೇಶವನ್ನು ರದ್ದುಗೊಳಿಸುವ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಡಿಎಚ್ಒ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಧರಣಿಯಲ್ಲಿ ರಾಷ್ಟ್ರೀಯ ಅಹಿಂದ್ ಸಂಘಟನೆಯ ಜಿಲ್ಲಾಧ್ಯಕ್ಷ ಘಾಳೇಪ್ಪಾ ಬೇಮಳಖೇಡಾ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರವೀಂದ್ರ ಭಂಗೆ, ಬಿವಿಎಸ್ ಜಿಲ್ಲಾಧ್ಯಕ್ಷ ಪ್ರದೀಪ್ ನಾಟೇಕರ್, ಲಕ್ಷ್ಮಣ್ ಎಸ್. ದೇವಕ, ಸೋಮಶೇಖರ್ ಕರಕನಳ್ಳಿ, ಅಂಥೋನಿ ಎಸ್. ದೊಡ್ಡಿ, ಸಚಿನ್ ಮೇತ್ರೆ ಹಾಗೂ ರವಿ ಶರ್ಮಾ ಸೇರಿದಂತೆ ಇತರರು ಭಾಗವಹಿಸಿದ್ದರು.