ಬೀದರ್ | ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿದ ರಾಜಶೇಖರ್ ಪಾಟೀಲ್; ಜಿಲ್ಲಾ ಕಾಂಗ್ರೆಸ್ ನಲ್ಲಿ ಮತ್ತಷ್ಟು ಕುತೂಹಲ
ಬೀದರ್ : ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಅತೃಪ್ತ ನಾಯಕರಾದ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ ಅವರು ಇಂದು ಭೇಟಿಯಾಗಿದ್ದು, ಜಿಲ್ಲಾ ಕಾಂಗ್ರೆಸ್ ನಲ್ಲಿ ಮತ್ತಷ್ಟು ಸಂಚಲನ ಮೂಡಿಸಿದೆ.
ಇಂದು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಕಾಂಗ್ರೆಸ್ ನಾಯಕರು, ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚಿಗೆ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಅತೃಪ್ತ ನಾಯಕರು ಬೆಂಗಳೂರಿನಲ್ಲಿ ಎರಡು ಸಲ ಸಭೆ ನಡೆಸಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಜೂ.29 ರಂದು ಬೀದರ್ ನ ಖಾಸಗಿ ಹೋಟೆಲ್ ಒಂದರಲ್ಲಿ ಸಭೆ ಕೂಡ ನಡೆಸಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಇಂದು(ಜೂ.30) ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಜಿಲ್ಲಾ ಕಾಂಗ್ರೆಸ್ ನಲ್ಲಿ ಕುತೂಹಲ ಮೂಡಿಸಿದೆ.