ಶಿಲ್ಪಾ ಶರ್ಮಾ

ಬೀದರ್: ಭಾರತ ಚುನಾವಣಾ ಆಯೋಗವು 2026ರ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಸೆಪ್ಟೆಂಬರ್ 29ರಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ಬೀದರ್ ಜಿಲ್ಲೆಯ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚುನಾವಣಾ ವೇಳಾಪಟ್ಟಿಯ ಪ್ರಕಾರ, ಸೆಪ್ಟೆಂಬರ್ 29ರಂದು ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 6 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 9 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಅಕ್ಟೋಬರ್ 23ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ತಕ್ಷಣದಿಂದಲೇ ಕ್ಷೇತ್ರಾದ್ಯಂತ ಜಾರಿಗೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಕಲಬುರಗಿ ವಿಭಾಗದ ವ್ಯಾಪ್ತಿಯಲ್ಲಿರುವ ಬೀದರ್ ಜಿಲ್ಲೆ ಕರ್ನಾಟಕ ಈಶಾನ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಸೇರಿರುವುದರಿಂದ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಬೀದರ್ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ನಾಮಪತ್ರಗಳ ನಮೂನೆಗಳನ್ನು ಕಲಬುರಗಿಯ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಚುನಾವಣೆ ಶಾಖೆಯಿಂದ ಪಡೆಯಬಹುದಾಗಿದೆ. ಭರ್ತಿ ಮಾಡಿದ ನಾಮಪತ್ರಗಳನ್ನು ಸೆಪ್ಟೆಂಬರ್ 29ರಿಂದ ಅಕ್ಟೋಬರ್ 6ರವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಪ್ರತಿದಿನ ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಲಬುರಗಿ ಜಿಲ್ಲಾಡಳಿತ ಭವನದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಕಾನ್ಫರೆನ್ಸ್ ಹಾಲ್‌ನಲ್ಲಿ ಸಲ್ಲಿಸಬಹುದಾಗಿದೆ.

ಸ್ವೀಕೃತವಾದ ಎಲ್ಲ ನಾಮಪತ್ರಗಳ ಪರಿಶೀಲನೆ ಅಕ್ಟೋಬರ್ 7ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor