Bidar | ಹಿರಿಯ ನಾಗರಿಕರು ಚಿಂತಾಮುಕ್ತರಾಗಿ ನೆಮ್ಮದಿಯ ಬದುಕು ನಡೆಸಬೇಕು: ರಾಘವೇಂದ್ರ ಉಪಾಧ್ಯೆ
ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಬೀದರ್: ಜಿಲ್ಲೆಯಲ್ಲಿ ವೃದ್ಧರು ಮತ್ತು ಹಿರಿಯ ನಾಗರಿಕರು ಚಿಂತಾಮುಕ್ತರಾಗಿ, ಸಾಮಾಜಿಕವಾಗಿ ನೆಮ್ಮದಿಯ ಬದುಕು ಕಳೆಯಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯೆ ಕರೆ ನೀಡಿದರು.
ಜಿಲ್ಲಾ ಬಾಲಭವನ ಸಭಾಗೃಹದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ್ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಘ-ಸಂಸ್ಥೆಗಳು ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶಿಬಿರ ಮತ್ತು ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ನಿಮಿತ್ತದ ಕಾನೂನು ಅರಿವು ಹಾಗೂ ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರ ಹಿತಾಸಕ್ತಿ ಮತ್ತು ರಕ್ಷಣೆಗಾಗಿ ಹಲವಾರು ಕಾನೂನುಗಳಿವೆ. ಅವುಗಳ ಕುರಿತು ತಿಳಿದುಕೊಳ್ಳುವ ಮೂಲಕ ಹಿರಿಯರು ತಮ್ಮ ಹಕ್ಕುಗಳ ರಕ್ಷಣೆಗಾಗಿ ಮುಂದಾಗಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಶ್ರೀಕಾಂತ್ ಮಾತನಾಡಿ, ಹಿರಿಯರನ್ನು ಸಮಾಜದಲ್ಲಿ ಗೌರವದಿಂದ ಕಾಣಬೇಕು. ಹಿರಿಯ ನಾಗರಿಕರಿಗೆ ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಯ ಕಚೇರಿಗೆ ಭೇಟಿ ನೀಡಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾರ್ಯಕ್ರಮದಲ್ಲಿ ಆರೋಗ್ಯ ತಪಾಸಣೆ ನಡೆಸಲಾಯಿತು. ಸೆಪ್ಟೆಂಬರ್ 22ರಂದು ನಡೆದ ಹಿರಿಯ ನಾಗರಿಕರ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬೀದರ್ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಾರದಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಸುಭಾಷ, ಯೋಜನಾ ಸಹಾಯಕ ಮಹೇಶ್, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹಾಗೂ ಸಂಸ್ಥೆಯ ಸಿಬ್ಬಂದಿ ವಿಜಯಲಕ್ಷ್ಮಿ, ಸುಭಾಷ್ ರೆಡ್ಡಿ ಸೇರಿದಂತೆ ವಿವಿಧ ವೃದ್ಧಾಶ್ರಮಗಳ ಮುಖ್ಯಸ್ಥರು, ಎಂ.ಆರ್.ಡಬ್ಲ್ಯೂ ಹಾಗೂ ವಿ.ಆರ್.ಡಬ್ಲ್ಯೂ ಸಿಬ್ಬಂದಿ ಮತ್ತು ಜಿಲ್ಲೆಯ ಹಿರಿಯ ನಾಗರಿಕರು ಉಪಸ್ಥಿತರಿದ್ದರು. ರೇಣುಕಾ ಕಾರ್ಯಕ್ರಮ ನಿರೂಪಿಸಿದರು.