×
Ad

ಬೀದರ್ | ಚಿಮ್ಮೆಗಾಂವ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸಿ : ಶಾಸಕ ಪ್ರಭು ಚವ್ಹಾಣ

Update: 2025-02-28 19:59 IST

ಬೀದರ್ : ಔರಾದ (ಬಿ) ತಾಲ್ಲೂಕಿನ ಚಿಮ್ಮೆಗಾಂವ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ನಿಲ್ಲಿಸಬೇಕು ಎಂದು ಶಾಸಕ ಪ್ರಭು ಚೌವ್ಹಾಣ್ ಆಗ್ರಹಿಸಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿಗಳಿಗೆ ಪತ್ರ ಬರೆದಿರುವ ಅವರು, ಕಲ್ಲು ಗಾಣಿಗಾರಿಕೆಯಿಂದ ರೈತರು ಮತ್ತು ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಕೂಡಲೇ ಗಣಿಗಾರಿಕೆ ನಿಲ್ಲಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದ್ದಾರೆ.

ಮೇಘನಾ ಕನ್ಟ್ರಕ್ಷನ್ಸ್ ಎಂಬ ಸಂಸ್ಥೆಯವರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ. ಇಲ್ಲಿಂದ ಹೊರಬರುತ್ತಿರುವ ವಿಪರೀತ ಧೂಳಿನಿಂದಾಗಿ ಸುತ್ತಲಿನ ಭೂ ಪ್ರದೇಶದಲ್ಲಿ ಕೃಷಿ ಮಾಡಿಕೊಂಡು ಬದುಕುತ್ತಿರುವ ರೈತರಿಗೆ ಮಾರಕವಾಗಿ ಪರಿಣಮಿಸಿದೆ. ದೊಡ್ಡ ಪ್ರಮಾಣದ ಯಂತ್ರ ಬಳಸುತ್ತಿರುವುದರಿಂದ ಧೂಳಿನಿಂದಾಗಿ ಬೆಳೆಗಳಿಗೆ ಹಾನಿ ಉಂಟಾಗುತ್ತಿದೆ. ಗಣಿಗಾರಿಕೆ ಆರಂಭವಾದಾಗಿನಿಂದ ಆದಾಯ ಸಿಗದೇ ನಮಗೆ ಅನ್ಯಾಯವಾಗುತ್ತಿದೆ ಎಂದು ಬಹಳಷ್ಟು ರೈತರು ನನ್ನ ಬಳಿ ಬಂದು ತಮ್ಮ ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಹತ್ತಿರದಲ್ಲೇ ಔರಾದ್-ಉದಗೀರ್ ಹೆದ್ದಾರಿ ಇದೆ. ಈ ಮಾರ್ಗದಲ್ಲಿ ಸಾಕಷ್ಟು ವಾಹನಗಳು ಓಡಾಡುತ್ತವೆ. ಗಣಿಗಾರಿಕೆಯಿಂದ ಹೊರಬರುವ ಧೂಳು ರಸ್ತೆಯ ಮೇಲೆ ಆವರಿಸುವುದರಿಂದ ವಾಹನ ಸವಾರರ ಕಣ್ಣುಗಳಲ್ಲಿ ಬಿದ್ದು, ಸಂಚರಿಸಲು ಪರದಾಡುವ ಪರಿಸ್ಥಿತಿ ಎದುರಾಗಿದೆ. ಈ ರಸ್ತೆಯ ಮೂಲಕ ಅನೇಕ ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗುವುದರಿಂದ ವಿದ್ಯಾರ್ಥಿಗಳಿಗೂ ಕೂಡ ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ತಮ್ಮ ನೋವು ಹಂಚಿಕೊಳ್ಳುತ್ತಿದ್ದಾರೆ.

ಈ ಕುರಿತು ಗ್ರಾಮ ಪಂಚಾಯತಿಯಲ್ಲಿ ಠರಾವು ಪಾಸ್ ಮಾಡಲಾಗಿದೆ. ಸಾಕಷ್ಟು ಸಲ ನೋಟಿಸ್ ಕೂಡ ನೀಡಲಾಗಿದೆ. ಆದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಚಿಮ್ಮೆಗಾಂವ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ತುರ್ತಾಗಿ ನಿಲ್ಲಿಸಿ, ರೈತ ಮತ್ತು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News