ಬೀದರ್‌: ಬಸ್ ನಿಲುಗಡೆಗೆ ಆಗ್ರಹಿಸಿ ಭಾಲ್ಕಿ ತಾಲೂಕಿನ ಹಾಲಹಳ್ಳಿ (ಕೆ) ಗ್ರಾಮದಲ್ಲಿ ಬೀದರ್–ಹುಮನಾಬಾದ್–ಕಲಬುರಗಿ ಸಂಪರ್ಕಿಸುವ ಪ್ರಮುಖ ರಸ್ತೆಯನ್ನು ತಡೆದು ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಜನರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ಪರಿಣಾಮ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಬೀದರ್–ಹುಮನಾಬಾದ್–ಕಲಬುರಗಿ ರಸ್ತೆ ಸಂಪೂರ್ಣ ಬಂದ್ ಆಗಿ, ಪ್ರಯಾಣಿಕರು ಪರದಾಡುವಂತಾಯಿತು.

ಗ್ರಾಮದಲ್ಲಿ ಬಸ್‌ಗಳ ಕೊರತೆ ಇದ್ದು, ಬೀದರ್ ಕಡೆಗೆ ತೆರಳುವ ಬಸ್‌ಗಳು ಸಂಪೂರ್ಣವಾಗಿ ಪ್ರಯಾಣಿಕರಿಂದ ಭರ್ತಿಯಾಗಿ ಬರುತ್ತಿವೆ. ಹೀಗಾಗಿ ಹಾಲಹಳ್ಳಿ (ಕೆ) ಗ್ರಾಮದಲ್ಲಿ ಬಸ್‌ಗಳನ್ನು ನಿಲ್ಲಿಸುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ತೀವ್ರ ತೊಂದರೆ ಎದುರಿಸುತ್ತಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಆದಷ್ಟು ಬೇಗ ಬಸ್ ಸಮಸ್ಯೆಯನ್ನು ಬಗೆಹರಿಸಿ, ಹಾಲಹಳ್ಳಿ (ಕೆ) ಗ್ರಾಮದಲ್ಲಿ ಬಸ್ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಧನ್ನೂರ್ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ, ಬಸ್ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುವುದಾಗಿ ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor