×
Ad

Bidar | ವಲಸೆ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಕ್ರಮ ವಹಿಸಿ : ಡಿಸಿ ಶಿಲ್ಪಾ ಶರ್ಮಾ

Update: 2025-11-13 21:08 IST

ಬೀದರ್ : ಬೇರೆ ರಾಜ್ಯಗಳಿಂದ ವಲಸೆ ಬರುವ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬಾಲ್ಯವಿವಾಹ ತಡೆಗಟ್ಟುವ ಸಮನ್ವಯ ಮತ್ತು ಪರಿಶೀಲನೆ ಸಮಿತಿ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಬ್ಬು ಕಟಾವು ಮಾಡಲು ಬೇರೆ ರಾಜ್ಯಗಳಿಂದ ಮತ್ತು ಜಿಲ್ಲೆಗಳಿಂದ ಕಾರ್ಮಿಕರು ತಮ್ಮ ಕುಟುಂಬದೊಂದಿಗೆ ಜಿಲ್ಲೆಗೆ ಬರುತ್ತಾರೆ. ಅವರ ಜೊತೆಗೆ ಮಕ್ಕಳು ಕೂಡ ಬರುವುದರಿಂದ ಅವರು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಆದ ಕಾರಣ ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮಕ್ಕಳ ಹಕ್ಕುಗಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಹತ್ತಿರದ ಗ್ರಾಮ ಪಂಚಾಯತ್ ಹಾಗೂ ಸಕ್ಕರೆ ಕಾರ್ಖಾನೆ ಮಾಲಕರು ಸಹಯೋಗದೊಂದಿಗೆ ಶಿಕ್ಷಣ ಮತ್ತು ಮೂಲಭೂತ ಸೌಕರ್ಯ ಒದಗಿಸುವ ಕಾರ್ಯ ಮಾಡಬೇಕು ಎಂದರು.

ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆ ತರುವ ಗುತ್ತಿಗೆದಾರರು ಮತ್ತು ವಲಸೆ ಕಾರ್ಮಿಕರು ಕಡ್ಡಾಯವಾಗಿ ನೊಂದಣಿ ಆಗಬೇಕು. ಇದರಿಂದಾಗಿ ವಲಸೆ ಬರುವ ಕಾರ್ಮಿಕರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಬಹುದು ಮತ್ತು ಅವರ ಮಕ್ಕಳು ಅಂಗನವಾಡಿ ಕೇಂದ್ರ ಮತ್ತು ಹತ್ತಿರ ಶಾಲೆಗಳಲ್ಲಿ ಶಿಕ್ಷಣ ನೀಡುವ ವ್ಯವಸ್ಥೆ ಮಾಡಲಾಗುವುದು ಹಾಗೂ ಮಹಿಳಾ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿರುವ ಕಾರ್ಖಾನೆಗಳಲ್ಲಿ ಮಕ್ಕಳ ಆರೈಕೆ ಕೇಂದ್ರ ಸ್ಥಾಪಿಸಬೇಕು ಎಂದು ತಿಳಿಸಿದರು.

ಬೀದರ್‌ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಲು ಎಲ್ಲಾ ಇಲಾಖೆಗಳ ಸಹಭಾಗಿತ್ವ ಬಹಳ ಮುಖ್ಯವಾಗಿದೆ. ಇಲಾಖೆಯ ಅಧಿಕಾರಿಗಳು ಕೂಡ ಎಲ್ಲೆ ಬಾಲ್ಯವಿವಾಹ ಕಂಡು ಬಂದಲ್ಲಿ ತಕ್ಷಣ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ, ಬಾಲ್ಯವಿವಾಹ ತಡೆಗಟ್ಟುವ ಕಾರ್ಯಗಳು ಮಾಡಬೇಕು ಎಂದು ಅವರು ಹೇಳಿದರು.

ಜಿಲ್ಲಾ, ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯತ್‌ ಮತ್ತು ಗ್ರಾಮ ಮಟ್ಟದ ಸರ್ಕಾರಿ ಕಚೇರಿ, ಅರೆ ಸರ್ಕಾರಿ, ಶೈಕ್ಷಣಿಕ ಸಂಸ್ಥೆಗಳು, ಖಾಸಗಿ ಸ್ವಯಂ ಸೇವಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ 1098 ನಾಮ ಫಲಕ ಅಳವಡಿಕೆ ಕಡ್ಡಾಯವಾಗಿದ್ದು, ಈ ಬಗ್ಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ ಎಂ.ಎಸ್, ಮೈಸೂರಿನ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಯ (ಆರ್‌ಎಲ್‌ಎಚ್‌ಪಿ) ರಾಜ್ಯ ಸಂಚಾಲಕಿ ಹಾಗೂ ಕರ್ನಾಟಕ ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನದ ನಿರ್ದೇಶಕಿ ಸರಸ್ವತಿ, ಬಾಲಕಾರ್ಮಿಕ ಪದ್ಧತಿ ವಿರೋಧಿ ಆಂದೋಲನದ ರಾಜ್ಯ ಸಂಯೋಜಕ ಸಂಪತ್ ಕಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ ಕೋಟೆಗೌಡರ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸೀಮಪ್ಪಾ, ಮರಾಠವಾಡ ಗ್ರಾಮೀಣ ವಿಕಾಸ ಸಂಸ್ಥೆಯ ಯೋಜನಾ ವ್ಯವಸ್ಥಾಪಕ ಅಶ್ವಜಿತ್ ಜಾಧವ್ ಹಾಗೂ ಮೌಲ್ಯಮಾಪಕ ಅನುಪ್ ಮೋರೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News