×
Ad

Bidar | ಕಾರಂಜಾ ಸಂತ್ರಸ್ತರ ಬೇಡಿಕೆ ಈಡೇರಿಸಲು ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಿ: ಡಾ. ಲಕ್ಷ್ಮಣ ದಸ್ತಿ

Update: 2026-03-07 19:23 IST

ಬೀದರ್: ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿರುವ ಕಾರಂಜಾ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಭೂಮಿ ನೀಡಿದ ರೈತ ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸಲು ಹಾಗೂ ಆದಷ್ಟು ಶೀಘ್ರ ಮುಖ್ಯಮಂತ್ರಿಗಳ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗುವಂತೆ ಹಿರಿಯ ಹೋರಾಟಗಾರ ಡಾ.ಲಕ್ಷ್ಮಣ ದಸ್ತಿ ಅವರ ನೇತೃತ್ವದ ಕಾರಂಜಾ ಸಂತ್ರಸ್ತರ ತಂಡ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಆಗ್ರಹಿಸಿದೆ.

ಕಾರಂಜಾ ನೀರಾವರಿ ಯೋಜನೆಗೆ ಭೂಮಿ ನೀಡಿದ ರೈತರು ದೀರ್ಘಕಾಲದಿಂದ ಸಮರ್ಪಕ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದು, ಮಾನವೀಯತೆ ಮತ್ತು ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಸೂಕ್ತ ಪರಿಹಾರ ನೀಡಬೇಕು ಎಂಬುದು ಸಂತ್ರಸ್ತರ ಪ್ರಮುಖ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾರಂಜಾ ಸಂತ್ರಸ್ತರ ಹೋರಾಟ ಸಮಿತಿಯು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದ ವೇಳೆ ಸಂತ್ರಸ್ತರ ನ್ಯಾಯಯುತ ಬೇಡಿಕೆಗಳನ್ನು ಪರಿಗಣಿಸಿ ಉನ್ನತ ಮಟ್ಟದ ತಾಂತ್ರಿಕ ಸಮಿತಿಯನ್ನು ರಚಿಸಲು ಆದೇಶಿಸಿದ್ದರು. ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ರಚನೆಯಾದ ಈ ಸಮಿತಿಯು ಸುಮಾರು ಎರಡು ತಿಂಗಳ ಹಿಂದೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೆ ಈ ವರದಿಯ ಮೇಲೆ ಇನ್ನೂ ಕ್ರಮ ಕೈಗೊಳ್ಳದಿರುವುದರಿಂದ ಸಂತ್ರಸ್ತರಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಹಿರಿಯ ಹೋರಾಟಗಾರರು ಹಾಗೂ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಡಾ. ಲಕ್ಷ್ಮಣ ದಸ್ತಿ ಅವರ ನೇತೃತ್ವದಲ್ಲಿ ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಸಚಿವ ರಹೀಂ ಖಾನ್ ಅವರನ್ನು ಭೇಟಿ ಮಾಡಿ ಈ ವಿಷಯದಲ್ಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಅಧಿವೇಶನದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಬಳಿ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಲು ವಿಶೇಷ ಪ್ರಯತ್ನ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಸಚಿವ ರಹೀಂ ಖಾನ್, ಕಾರಂಜಾ ಸಂತ್ರಸ್ತರ ಮುಳುಗಡೆ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ಹೊಚಕನಳ್ಳಿ, ವಿನಯ್ ಮಾಳಗೆ, ರೋಹನಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News