ಬೀದರ್‌ ಅನ್ನು ಬರಪೀಡಿತ ಜಿಲ್ಲೆ ಘೋಷಿಸಲು ಅಧಿವೇಶನದಲ್ಲಿ ಚರ್ಚಿಸಲಾಗುವುದು : ಸಚಿವ ಈಶ್ವರ್ ಖಂಡ್ರೆ

"2.5 ಲಕ್ಷ ರೈತರು ಬೆಳೆ ವಿಮೆಯಡಿ ನೋಂದಣಿ"

Update: 2026-08-12 17:02 IST

ಬೀದರ್: ಜೂನ್ ಮತ್ತು ಜುಲೈ ತಿಂಗಳಲ್ಲಿ ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಬೆಳೆಗಳು ಹಾನಿಗೀಡಾಗಿದ್ದು, ಬೀದರ್‌ನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸುವ ಕುರಿತು ವಿಧಾನಮಂಡಲದ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಬೀದರ್ ಜಿಲ್ಲಾ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆದ ಬರ, ಕುಡಿಯುವ ನೀರು ಹಾಗೂ ಇತರೆ ವಿಷಯಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆ ಕೊರತೆ ಹಾಗೂ ತೇವಾಂಶದ ಅಭಾವದಿಂದ ಬೆಳೆ ನಷ್ಟ ಅನುಭವಿಸುತ್ತಿರುವ ರೈತರ ನೆರವಿಗೆ ಸರ್ಕಾರ ತಕ್ಷಣ ಸ್ಪಂದಿಸಲಿದೆ ಎಂದರು.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 4.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿತ್ತು. ಆದರೆ, ಮಳೆಯ ಏರುಪೇರು ಹಾಗೂ ಸುದೀರ್ಘ ಒಣಹವೆಯಿಂದಾಗಿ ಬಿತ್ತನೆಯಾದ ಹೆಸರು, ಉದ್ದು ಸೇರಿದಂತೆ ಪ್ರಮುಖ ಬೆಳೆಗಳು ಒಣಗಿ ಹಾಳಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಮಧ್ಯಂತರ ಬೆಳೆ ಹಾನಿ ಪರಿಹಾರಕ್ಕೆ ಪ್ರಸ್ತಾವನೆ :

ಬೆಳೆ ವಿಮೆ ಯೋಜನೆಯಡಿ ‘ಮಿಡ್-ಸೀಸನ್ ಅಡ್ವರ್ಸಿಟಿ’ (ಮಧ್ಯಂತರ ಬೆಳೆ ಹಾನಿ) ನಿಯಮಗಳನ್ನು ಸಕ್ರಿಯಗೊಳಿಸಲು ಕೃಷಿ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಕೃಷಿ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರೊಂದಿಗೆ ಮಾತುಕತೆ ನಡೆಸಲಾಗಿದ್ದು, ಮುಖ್ಯಮಂತ್ರಿ ಅವರ ಗಮನಕ್ಕೂ ತರಲಾಗಿದೆ. ಮಾನದಂಡಗಳ ಪ್ರಕಾರ ರೈತರಿಗೆ ಪರಿಹಾರ ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಪ್ರಸಕ್ತ ಸಾಲಿನಲ್ಲಿ ಸಾಲ ಪಡೆದ ಹಾಗೂ ಪಡೆಯದ ಸುಮಾರು 2.5 ಲಕ್ಷಕ್ಕೂ ಅಧಿಕ ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ಮಧ್ಯಂತರ ಬೆಳೆ ಹಾನಿಯ ನಿಖರ ವರದಿ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಗೆ ಬೆಳೆ ವಿಮೆ ಯೋಜನೆಯಡಿ ಈಗಾಗಲೇ 236 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕುಡಿಯುವ ನೀರು ಯೋಜನೆಗಳ ವಿಳಂಬಕ್ಕೆ ಆಕ್ರೋಶ :

ಜಿಲ್ಲೆಯಲ್ಲಿ ಕುಡಿಯುವ ನೀರು, ಬರ ನಿರ್ವಹಣೆ ಹಾಗೂ ಕೃಷಿ ಸಮಸ್ಯೆಗಳ ಕುರಿತು ನಿರಂತರ ನಿಗಾ ವಹಿಸಲಾಗುತ್ತಿದೆ. ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಈಗಾಗಲೇ ಎರಡು ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಿ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಳ್ಳದಿರುವ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿಗಳಲ್ಲಿ ವಿಳಂಬ ಮಾಡುತ್ತಿರುವ ಹಾಗೂ ಕಳಪೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ನೋಟಿಸ್ ಜಾರಿಗೊಳಿಸಿ, ಮುಂದಿನ ಸಭೆಯ ವೇಳೆಗೆ ಸಂಪೂರ್ಣ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಆ. 11ರಂದು 20 ಸಾವಿರ ಮಂದಿಗೆ ಉದ್ಯೋಗ :

‘ಬಿವಿ-ಜಿ ರಾಮ್ ಜಿ’ ಯೋಜನೆಯಡಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಆ. 11ರಂದು ಜಿಲ್ಲೆಯಲ್ಲಿ 20 ಸಾವಿರ ಜನರು ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದು, ಇದುವರೆಗೆ ಒಟ್ಟು 3.29 ಲಕ್ಷ ಮಾನವ ದಿನಗಳು ಸೃಷ್ಟಿಯಾಗಿವೆ ಎಂದು ಹೇಳಿದರು.

ಪ್ರತಿದಿನ ಬೆಳಗ್ಗೆ ತಾಲೂಕು ಪಂಚಾಯಿತಿ ಅಧಿಕಾರಿಗಳು ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಬೇಕು. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲ ಸಂಬಂಧಪಟ್ಟ ಇಲಾಖೆಗಳು ಉದ್ಯೋಗ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ನೀರಿನ ಶುದ್ಧೀಕರಣ ಘಟಕಗಳ ನಿರ್ವಹಣೆಗೆ ಗುತ್ತಿಗೆ :

ಕೆಲವು ಗ್ರಾಮ ಪಂಚಾಯಿತಿಗಳಲ್ಲಿರುವ ನೀರು ಶುದ್ಧೀಕರಣ ಘಟಕಗಳು ಬಹುತೇಕ ಹಾಳಾಗಿರುವ ಹಿನ್ನೆಲೆಯಲ್ಲಿ, ಅವುಗಳ ನಿರ್ವಹಣೆಯನ್ನು ಮೂರು ವರ್ಷಗಳ ಅವಧಿಗೆ ಗುತ್ತಿಗೆ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ಘಟಕಗಳ ಸಂಪೂರ್ಣ ನಿರ್ವಹಣೆಯನ್ನು ಗುತ್ತಿಗೆದಾರರೇ ವಹಿಸಿಕೊಳ್ಳುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬದೋಲೆ, ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News