Bidar | ಹಾಲು ಉತ್ಪಾದಕರ ಸಹಕಾರ ಸಂಘಗಳ ಅಭಿವೃದ್ಧಿಗೆ ಅಧಿಕಾರಿಗಳಿಗೆ ತರಬೇತಿ ಅಗತ್ಯ: ರೇವಣಸಿದ್ದಪ್ಪ ಪಾಟೀಲ್
ಬೀದರ್: ಹಾಲು ಉತ್ಪಾದಕರ ಸಹಕಾರ ಸಂಘಗಳ ಅಭಿವೃದ್ಧಿ ಹಾಗೂ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಾಲಕಾಲಕ್ಕೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ಕಲಬುರಗಿ, ಬೀದರ್ ಹಾಗೂ ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕ ರೇವಣಸಿದ್ದಪ್ಪ ಪಾಟೀಲ್ ಹೇಳಿದರು.
ನಗರದ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್ ಕಲಬುರಗಿ-ಬೀದರ್, ಯಾದಗಿರಿ ಹಾಲು ಒಕ್ಕೂಟ ಹಾಗೂ ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬಸವಕಲ್ಯಾಣ ಮತ್ತು ಹುಮನಾಬಾದ್ ತಾಲ್ಲೂಕುಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗಾಗಿ ಗುರುವಾರ ಆಯೋಜಿಸಿದ್ದ ಒಂದು ದಿನದ ವಿಶೇಷ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತರಬೇತಿಯಿಂದ ಸಂಘಗಳ ಕಾರ್ಯನಿರ್ವಹಣೆಯ ಗುಣಮಟ್ಟ ಸುಧಾರಿಸುವುದರ ಜತೆಗೆ ಹಾಲು ಉತ್ಪಾದನೆ ಹೆಚ್ಚಿಸಲು ಸಹಕಾರಿಯಾಗುತ್ತದೆ. ಕಾರ್ಯದರ್ಶಿಗಳು ತರಬೇತಿಯಲ್ಲಿ ನೀಡುವ ಮಾಹಿತಿಯನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಸಂಘಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಡಾ. ನೀಲಾಂಬಿಕಾ ಮಾತನಾಡಿ, ಪ್ರತಿಯೊಂದು ಸಹಕಾರ ಸಂಘವೂ ಇಂತಹ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ಸಂಘಗಳ ಹಣಕಾಸಿನ ವ್ಯವಹಾರಗಳಲ್ಲಿ ಪಾರದರ್ಶಕತೆ ಕಾಪಾಡಲು ಕಾಲಕಾಲಕ್ಕೆ ಲೆಕ್ಕಪರಿಶೋಧನೆ ಮಾಡಿಸಬೇಕು. ಸಹಕಾರ ಸಂಘಗಳ ಚುನಾವಣಾ ಪ್ರಕ್ರಿಯೆ ಹಾಗೂ ಸಂಬಂಧಿತ ನಿಯಮಗಳ ಬಗ್ಗೆಯೂ ಅಧಿಕಾರಿಗಳು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆಐಸಿಎಂ ಪ್ರಾಂಶುಪಾಲ ಅರುಣಕುಮಾರ್ ಬಿ. ಹರಸೂರು, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ವೈಜಿನಾಥ್, ಸೌಹಾರ್ದ ತರಬೇತಿ ಕೇಂದ್ರದ ನಿರ್ದೇಶಕ ಸುಬ್ರಮಣ್ಯ ಪ್ರಭು, ಪಶುಪಾಲನಾ ಇಲಾಖೆಯ ಪಶುವೈದ್ಯಾಧಿಕಾರಿ ದೇವಾನಂದ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ದಯಾನಂದ್ ಜಿ., ವೀರೇಶ್ ತೂಗಾಂವ್, ಕಿರಣಕುಮಾರ್ ಕಾಮಶೆಟ್ಟಿ, ಮಲ್ಲಿಕಾರ್ಜುನ್ ಪಾಂಚಾಳ್, ಹಾಲು ಒಕ್ಕೂಟದ ಅಧಿಕಾರಿಗಳು ಹಾಗೂ ಯೂನಿಯನ್ ಸಿಬ್ಬಂದಿ ಉಪಸ್ಥಿತರಿದ್ದರು.
ಜಿಲ್ಲಾ ಸಹಕಾರ ಶಿಕ್ಷಕ ಮಾರುತಿ ಸ್ವಾಗತಿಸಿ, ನಿರೂಪಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಆರ್. ಮಲ್ಲಮ್ಮ ವಂದಿಸಿದರು.