ಬೀದರ್ | ಮಳೆಯಿಂದ ಹದಗೆಟ್ಟ ಮುಡಬಿ ಗ್ರಾಮದ ರಸ್ತೆ ದುರುಸ್ತಿ ಮಾಡಲು ಗ್ರಾಮಸ್ಥರಿಂದ ಆಗ್ರಹ
Update: 2025-09-27 19:25 IST
ಬೀದರ್ : ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದಲ್ಲಿನ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ದುರುಸ್ತಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಚರಂಡಿ ವ್ಯವಸ್ಥೆ ಸರಿಯಿಲ್ಲದ ಕಾರಣ ಮಳೆಯಿಂದ ರಸ್ತೆಯ ತುಂಬೆಲ್ಲ ನೀರು ನಿಂತಿದೆ. ಈ ರಸ್ತೆಯು ಗ್ರಾಮದ ಪ್ರಮುಖ ರಸ್ತೆಯಾಗಿದ್ದು, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರ್ಕಾರಿ ಪ್ರೌಢಶಾಲೆಗೆ ಸಂಪರ್ಕ ಕಲ್ಪಿಸುತ್ತದೆ. ರಸ್ತೆ ತುಂಬೆಲ್ಲ ಗುಂಡಿಗಳು ಬಿದ್ದು ನೀರು ತುಂಬಿದ್ದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ, ಈ ರಸ್ತೆಯನ್ನು ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರಾದ ಅಭಿ ಅಣಕಲ್, ನವೀನ್ ಹಾಗೂ ಶಂಭು ಖೇಳಗೆಕರ್ ಸೇರಿದಂತೆ ಇತರರು ಆಗ್ರಹಿಸಿದ್ದಾರೆ.