Bidar | ಕಾರಂಜಾ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ: ಮುನ್ನೆಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ಮನವಿ
ಬೀದರ್ : ಬೇಸಿಗೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ ಕಾರಂಜಾ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಆದೇಶಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಮೇ 4ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ತೀರ್ಮಾನದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಕಲಬುರಗಿಯ ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಜಲಾಶಯದಿಂದ ನೀರು ಹರಿಸಲು ನಿರ್ದೇಶನ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೇ 16ರಿಂದ ಜೂನ್ 6ರವರೆಗೆ ಕಾರಂಜಾ ಯೋಜನೆಯ ಎಡದಂಡೆ, ಬಲದಂಡೆ, ಕಾರಂಜಾ ಏತ ನೀರಾವರಿ ಹಾಗೂ ಅತಿವಾಳ ಏತ ನೀರಾವರಿ ಕಾಲುವೆಗಳ ಮೂಲಕ ಒಟ್ಟು 0.6 ಟಿಎಂಸಿ ನೀರನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ.
ಕಾಲುವೆಗಳಿಗೆ ನೀರು ಹರಿಯುವ ಹಿನ್ನೆಲೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಇಲಾಖೆ ಮನವಿ ಮಾಡಿದೆ. ಸುರಕ್ಷತೆಯ ದೃಷ್ಟಿಯಿಂದ ಕಾಲುವೆಗಳಿಗೆ ಇಳಿಯುವುದು, ಬಟ್ಟೆ ಒಗೆಯುವುದು, ಈಜಾಡುವುದು ಹಾಗೂ ದನಕರುಗಳಿಗೆ ಕಾಲುವೆ ನೀರು ಕುಡಿಸುವುದನ್ನು ತಪ್ಪಿಸಬೇಕು ಎಂದು ಸೂಚಿಸಲಾಗಿದೆ.
ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಪಾಲಿಸಿ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.