ಬೀದರ್: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಮಂಗಳವಾರ ಬೆಳಿಗ್ಗೆ ಸುಮಾರು 6.30 ಗಂಟೆಯಿಂದಲೇ ಬೀದರ್ ತಾಲೂಕಿನ ಮನ್ನಳ್ಳಿ, ಬರೂರ್ ಹಾಗೂ ನಾಗೂರಾ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಮೊದಲು ಮನ್ನಳ್ಳಿ ವಸತಿ ಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ವಸತಿ ಕೊಠಡಿಗಳನ್ನು ಪರಿಶೀಲಿಸಿದರು. ಹಾಸ್ಟೆಲ್ ಕೊಠಡಿಗಳನ್ನು ವೀಕ್ಷಿಸಿ, ಕಾಟ್‌ಗಳ ಸುರಕ್ಷತೆ ಕುರಿತು ವಾರ್ಡನ್‌ಗೆ ಅಗತ್ಯ ಸೂಚನೆ ನೀಡಿದರು. ವಿದ್ಯಾರ್ಥಿಗಳೊಂದಿಗೆ ಪಠ್ಯಕ್ರಮ ಹಾಗೂ ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳ ಕುರಿತು ಸಂವಾದ ನಡೆಸಿದರು. ಬಳಿಕ ಕೂಸಿನ ಮನೆ ಹಾಗೂ ಗ್ರಂಥಾಲಯಕ್ಕೆ ಭೇಟಿ ನೀಡಿ, ಅಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ನಂತರ ಗ್ರಾಮದ ನೀರಿನ ಸಂಪರ್ಕ ವ್ಯವಸ್ಥೆಯನ್ನು ಪರಿಶೀಲಿಸುವ ಸಂದರ್ಭದಲ್ಲಿ, ಗ್ರಾಮಕ್ಕೆ ನೀರು ಸರಬರಾಜು ಮಾಡುವ ಟ್ಯಾಂಕ್‌ನಿಂದ ಅನಗತ್ಯವಾಗಿ ನೀರು ಹರಿದು ವ್ಯರ್ಥವಾಗುತ್ತಿರುವುದು ಸಿಇಒ ಅವರ ಗಮನಕ್ಕೆ ಬಂತು. ಬರಗಾಲದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ಕಾರಣಕ್ಕೂ ನೀರನ್ನು ಅನಗತ್ಯವಾಗಿ ವ್ಯರ್ಥ ಮಾಡದಂತೆ ವ್ಯವಸ್ಥಿತ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಮನ್ನಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದ ಅವರು, ಸ್ವಚ್ಛತೆ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಪರಿಶೀಲಿಸಿದರು. ರೋಗಿಗಳಿಗೆ ನೀಡುವ ಮಾತ್ರೆಗಳು ಹಾಗೂ ಔಷಧಗಳ ದಾಸ್ತಾನು ಸಮರ್ಪಕವಾಗಿದೆಯೇ ಎಂಬುದನ್ನು ಫಾರ್ಮಸಿಯಲ್ಲಿ ಪರಿಶೀಲಿಸಿದರು. ನಂತರ ಪ್ರಯೋಗಾಲಯಕ್ಕೆ ಭೇಟಿ ನೀಡಿ, ಅಲ್ಲಿನ ತಪಾಸಣಾ ವ್ಯವಸ್ಥೆಯನ್ನು ವೀಕ್ಷಿಸಿದರು.

ಗ್ರಾಮದಲ್ಲಿ ಕೈಗೊಂಡಿರುವ ವಿಬಿ-ಜಿ ರಾಮ್ ಜಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕೇವಲ ಕಾಮಗಾರಿ ವೀಕ್ಷಣೆಗೆ ಸೀಮಿತವಾಗದೆ, ಸ್ಥಳದಲ್ಲಿದ್ದ ಕಾರ್ಮಿಕರ ಹಾಜರಾತಿಯನ್ನು ಸ್ವತಃ ಪರಿಶೀಲಿಸಿದರು. ಬಳಿಕ ಕೆಲಸಗಾರರೊಂದಿಗೆ ಕಾಯಕದಲ್ಲಿ ತೊಡಗಿಸಿಕೊಂಡು ಶ್ರಮದಾನದ ಅನುಭವ ಪಡೆದರು.

ನಂತರ ಬರೂರ್ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿದ ಅವರು, ಸ್ಥಳದಲ್ಲಿದ್ದ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರು ಅಳಲು ತೋಡಿಕೊಂಡರು. ಇದಕ್ಕೆ ತಕ್ಷಣ ಸ್ಪಂದಿಸಿದ ಸಿಇಒ, ಗ್ರಾಮದ ನೀರಿನ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲಾಗುವುದು. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದರು.

ಬಳಿಕ ಬರೂರ್ ಹಾಗೂ ನಾಗೂರಾ ಗ್ರಾಮಗಳಲ್ಲಿನ ವಿಬಿ-ಜಿ ರಾಮ್ ಜಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ, ಕಾಮಗಾರಿಗಳ ಪ್ರಗತಿ ಹಾಗೂ ಸ್ಥಳದಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್, ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕಿ ಲಕ್ಷ್ಮಿ ಬಿರಾದರ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಸಂಜುಕುಮಾರ್‌, ವಿಷ್ಣು ಕುಲಕರ್ಣಿ, ಮಿಥುನ್ ಹಾಗೂ ಐಇಸಿ‌ ಸಂಯೋಜಕ ಸತ್ಯಜೀತ್‌ ನೀಡೋದಿಕರ್ ಸೇರಿದಂತೆ ಇತರೆ ಅಧಿಕಾರಿ, ಸಿಬ್ಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor