×
Ad

ಮಳೆಯಿಂದ ಹಾನಿಯಾದ ಬೆಳೆಗಳಿಗೆ 15 ದಿನದೊಳಗಾಗಿ ಪರಿಹಾರ ಒದಗಿಸಲು ಕ್ರಮ: ಸಚಿವ ಈಶ್ವರ್ ಖಂಡ್ರೆ

Update: 2025-09-28 18:10 IST

ಬೀದರ್: ಜಿಲ್ಲಾದ್ಯಂತ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಹಾನಿಯಾದ ಬೆಳೆಗಳ ಜಂಟಿ ಸಮೀಕ್ಷೆಯನ್ನು ಶೀಘ್ರವೇ ಪೂರ್ಣಗೊಳಿಸಿ, ಪರಿಹಾರವನ್ನು 15 ದಿನದೊಳಗಾಗಿ ಒದಗಿಸಲು ಅಗತ್ಯ ಕ್ರಮಕೈಗೊಳ್ಳುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯಿಂದ, ಮಾನವ ಜೀವ ಹಾನಿ, ಪ್ರಾಣಿ ಜೀವ ಹಾನಿ, ಮನೆ ಹಾನಿ, ಬೆಳೆ ಹಾನಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಬ್ರಿಡ್ಜ್, ಶಾಲಾ ಹಾಗೂ ಅಂಗನವಾಡಿ ಕೊಠಡಿಗಳು, ವಿದ್ಯುತ್ ಸಂಪರ್ಕ, ಕೆರೆ, ಆರೋಗ್ಯ ಕೇಂದ್ರಗಳು ಹಾನಿಗೊಳಗಾಗಿವೆ. ಈ ಬಗ್ಗೆ ಪರಿಹಾರ ಕ್ರಮಗಳ ಕುರಿತು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ತುರ್ತು ಕ್ರಮಗಳನ್ನು ಕೈಗೊಳ್ಳುವ ಮೂಲಕ ಅತಿವಷ್ಠಿಯಿಂದ ಆಗಬಹುದಾದ ಅನಾಹುತಗಳನ್ನು ಕಡಿಮೆಗೊಳಿಸಲು ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಅತಿವೃಷ್ಠಿ ನಿರ್ವಹಣೆ ಮಾಡುವ ದೃಷ್ಠಿಯಿಂದ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಾರ್ಯನಿರ್ವಹಿಸಲು ಹಾಗೂ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ರಜೆಯನ್ನು ಮಂಜೂರು ಮಾಡದಿರಲು ಸೂಚಿಸಲಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಎಸ್‍ಡಿಆರ್‍ಎಫ್ ಮತ್ತು ಎನ್‍ಡಿಆರ್‍ಎಫ್ ಗಳನ್ನು ಕಾರ್ಯಸನ್ನದಗೊಳಿಸಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಪರಿಹಾರ ಕ್ರಮಕೈಗೊಳ್ಳಲಾಗವುದು ಎಂದಿದ್ದಾರೆ.

ಅತಿವೃಷ್ಠಿಯಾದ ಪ್ರದೇಶಗಳಿಗೆ ಸಂಬಂಧಿಸಿದ ಉಪ ವಿಭಾಗಾಧಿಕಾರಿಗಳು ಕಡ್ಡಾಯವಾಗಿ ಭೇಟಿ ನೀಡಬೇಕು. ಹೆಚ್ಚು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಂಬಂಧಿಸಿದ ಇಲಾಖೆಗಳನ್ನೊಳಗೊಂಡ ತಂಡವು ಪರಿಸ್ಥಿತಿ ನಿಯಂತ್ರಿಸಲು ಖುದ್ದು ಮೊಕ್ಕಾಂ ಹೂಡಲು ಕ್ರಮವಹಿಸಲು ಸೂಚನೆ ನೀಡಲಾಗಿದೆ. ಹಾನಿಗೊಳಗಾದ ಎಲ್ಲಾ ಬೆಳೆಗಳ ಪ್ರದೇಶಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ಶೀಘ್ರವಾಗಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರವಾಹ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಸರ್ಕಾರ ಬದ್ಧವಾಗಿದ್ದು, ರೈತರೊಂದಿಗೆ ತಾವು ಮತ್ತು ಸರ್ಕಾರ ಸದಾ ಬೆಂಬಲಕ್ಕೆ ಇರುತ್ತದೆ. ಯಾರೂ ಆತಂಕಕ್ಕೆ ಒಳಗಾಗಬಾರದು. ಜಿಲ್ಲೆಯಲ್ಲಿ ಮಳೆಯಿಂದಾದ ಹಾನಿ ಹಾಗೂ ಪ್ರವಾಹ ನಿರ್ವಹಣೆ ಕುರಿತು ಚರ್ಚಿಸಿ ಪರಾಮರ್ಶನೆ ನಡೆಸಲು ಜಿಲ್ಲಾಡಳಿತ ಹಾಗೂ ಜಿಲ್ಲೆಯ ಅಧಿಕಾರಿಗಳೊಂದಿಗೆ ಸೆ. 30 ರಂದು ಸಭೆ ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News