ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ : ಪರಿಹಾರಕ್ಕಾಗಿ ರೈತ ಸಂಘ ಮನವಿ
ಬೀದರ್ : ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಬೀಳುತ್ತಿರುವ ಧಾರಾಕಾರ ಮಳೆಯಿಂದಾಗಿ ಉದ್ದು, ಹೆಸರು, ಸೋಯಾಬೀನ್, ತೋಗರಿ, ಹತ್ತಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಭಾರೀ ಹಾನಿ ಉಂಟಾಗಿದೆ. ಇದರಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದು, ಪರಿಹಾರ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕವು ಮನವಿ ಮಾಡಿವೆ.
ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, 50ಕ್ಕೂ ಹೆಚ್ಚು ಜಾನುವಾರುಗಳು ನೀರಿನಲ್ಲಿ ಕೊಚ್ಚಿ ಹೋಗಿ ಸಾವಿಗೀಡಾಗಿವೆ. ಅನೇಕ ಮನೆಗಳು ಕುಸಿದು ಬಿದ್ದಿದ್ದು, ಜಿಲ್ಲೆಯ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಹಾನಿಯಾದ ಪ್ರತಿ ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ನೀಡಬೇಕು. ಸಾವಿಗೀಡಾದ ಜಾನುವಾರುಗಳಿಗೆ, ಕುಸಿದ ಮನೆಗಳಿಗೆ ತಕ್ಷಣ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕು. ಹಾಗೆಯೇ ಪ್ರತಿ ಟನ್ ಕಬ್ಬಿಗೆ ಒಂದು ಕೆಜಿ ಸಕ್ಕರೆ ಕೊಡಬೇಕು. ಬೆಳೆ ವಿಮೆ ಕಟ್ಟಿದ ರೈತರಿಗೆ ಶೀಘ್ರದಲ್ಲೇ ವಿಮೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಗಿದೆ.
ನಮ್ಮ ಬೇಡಿಕೆಗಳು ತಕ್ಷಣವೇ ಪೂರೈಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು. ಇದರಿಂದಾಗುವ ಪರಿಣಾಮಗಳಿಗೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ್ ಸ್ವಾಮಿ ಸಿರ್ಸಿ, ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್ ಜಮಖಂಡಿ, ಪ್ರವೀಣ್ ಕುಲಕರ್ಣಿ ಹಾಗೂ ಸುಭಾಷ ರಗಟೆ ಸೇರಿದಂತೆ ಇತರರು ಇದ್ದರು.