ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ತಡೆಗೆ ಆಗ್ರಹ

Update: 2026-08-19 16:45 IST

ಹುಮನಾಬಾದ್: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಯ ಮರುಹರಾಜು ಪ್ರಕ್ರಿಯೆಯನ್ನು ತಡೆದು, ಎಲ್‌ಆರ್‌ಒಟಿ ಆಧಾರದ ಮೇಲೆ ಖಾಸಗಿಯವರಿಗೆ ಗುತ್ತಿಗೆ ನೀಡಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಬೇಕು ಎಂದು ಮಾಜಿ ಸಚಿವ ರಾಜಶೇಖರ್ ಪಾಟೀಲ್ ನೇತೃತ್ವದ ನಿಯೋಗ ಆಗ್ರಹಿಸಿದೆ.

ಈ ಕುರಿತು ನಿಯೋಗವು ಬುಧವಾರ ವಿಧಾನಸೌಧದಲ್ಲಿ ಸಹಕಾರ ಇಲಾಖೆ ಸಚಿವ ಲಕ್ಷ್ಮಣ ಸವದಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಬೀದರ್ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಮರುಹರಾಜು ಮಾಡಲು ನೋಟಿಸ್ ನೀಡಲಾಗಿದೆ. ಅದರಂತೆ ಸೆ.2, 2026ರಂದು ಹರಾಜು ಪ್ರಕ್ರಿಯೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನಿಯೋಗ ತಿಳಿಸಿತು.

ಕಾರ್ಖಾನೆಯ ಹರಾಜು ಪ್ರಕ್ರಿಯೆಯನ್ನು ಕೂಡಲೇ ತಡೆಹಿಡಿದು, ಎಲ್‌ಆರ್‌ಒಟಿ ಆಧಾರದ ಮೇಲೆ ಖಾಸಗಿಯವರಿಗೆ ಗುತ್ತಿಗೆ ನೀಡಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಬೇಕು ಎಂದು ಒತ್ತಾಯಿಸಲಾಯಿತು.

ಹರಾಜು ಪ್ರಕ್ರಿಯೆ ಸ್ಥಗಿತಗೊಳಿಸಿ ಗುತ್ತಿಗೆ ನೀಡುವುದರಿಂದ ಕಾರ್ಖಾನೆಯನ್ನು ಅವಲಂಬಿಸಿರುವ ನೂರಾರು ಕಾರ್ಮಿಕರು, ಕಾರ್ಖಾನೆಗೆ ಸಾಲ ನೀಡಿರುವ ಬ್ಯಾಂಕ್‌ಗಳು ಹಾಗೂ ರೈತರ ಹಿತ ಕಾಪಾಡಲು ಸಾಧ್ಯವಾಗಲಿದೆ. ಕಾರ್ಖಾನೆಯನ್ನು ಹರಾಜು ಹಾಕಿದರೆ ಜಿಲ್ಲೆಯ ರೈತರಿಗೆ ತೀವ್ರ ತೊಂದರೆಯಾಗಲಿದೆ ಎಂದು ನಿಯೋಗ ತಿಳಿಸಿತು.

ಮನವಿಗೆ ಸ್ಪಂದಿಸಿದ ಸಚಿವ ಲಕ್ಷ್ಮಣ ಸವದಿ ಅವರು, ಹರಾಜು ಪ್ರಕ್ರಿಯೆಯನ್ನು ತಡೆಹಿಡಿಯುವಂತೆ ಬೀದರ್ ಡಿಸಿಸಿ ಬ್ಯಾಂಕ್‌ಗೆ ಸೂಕ್ತ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ರೈತ ಮುಖಂಡರು, ಕಾರ್ಖಾನೆ ನೌಕರರ ಪ್ರತಿನಿಧಿಗಳು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News