×
Ad

ಬೀದರ್ | ಮಾರ್ಚ್‌ನಲ್ಲಿ 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ : ಡಾ.ಗಿರೀಶ್ ಬದೋಲೆ

Update: 2025-02-21 12:14 IST

ಡಾ.ಗಿರೀಶ್ ಬದೋಲೆ

ಬೀದರ್: ಮಾರ್ಚ್ ತಿಂಗಳಲ್ಲಿ ಜಿಲ್ಲೆಯ ಸುಮಾರು 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುವ ಹಳ್ಳಿಗಳ ಬಗ್ಗೆ ಇನ್ನು ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ಎಲ್ಲಾ ಗ್ರಾಮ ಪಂಚಾಯತ್ ಪಿಡಿಓ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿ, ಇಂಜಿನಿಯರ್ ಜತೆ ಸಭೆ ಜರುಗಿಸಿ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಕಳೆದ ವರ್ಷ ಒಟ್ಟು 90 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಿತ್ತು. 18 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ 72 ಗ್ರಾಮಗಳಲ್ಲಿ ಬೋರವೆಲ್‌ಗಳ ಕೊರೆಸಿ ನೀರು ಸರಬರಾಜು ಮಾಡಲಾಗಿತ್ತು. ಔರಾದ್, ಬಸವಕಲ್ಯಾಣ, ಭಾಲ್ಕಿ ಹಾಗೂ ಕಮಲನಗರ ತಾಲ್ಲೂಕಿನ ಹಳ್ಳಿಗಳಲ್ಲಿ ಹೆಚ್ಚಾಗಿ ನೀರಿನ ಸಮಸ್ಯೆ ಇರುತ್ತದೆ ಎಂದು ತಿಳಿಸಿದರು.

ಮಾರ್ಚ್ ತಿಂಗಳಲ್ಲಿ ನೀರಿನ ಸಮಸ್ಯೆಯಾಗುವ 46 ಹಳ್ಳಿಗಳಲ್ಲಿ ಔರಾದ್ ನ 18, ಕಮಲನಗರ್ 8, ಭಾಲ್ಕಿ 15, ಹುಲಸೂರು 3, ಬಸವಕಲ್ಯಾಣದಲ್ಲಿ ಕೆಲ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು. ಚಿಟಗುಪ್ಪ ಹಾಗೂ ಹುಮನಾಬಾದ್ ತಾಲ್ಲೂಕಿನಲ್ಲಿ ನೀರಿನ ಸಮಸ್ಯೆಯಾಗುವುದಿಲ್ಲ. ಸದ್ಯಕ್ಕೆ ಔರಾದ್ ತಾಲ್ಲೂಕಿನ ಮುರ್ಕಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಶಿವಂಪುರ್ ತಾಂಡಾದಲ್ಲಿ ಟ್ಯಾಂಕರ್ ನೀರು ಒದಗಿಸಲಾಗುತ್ತಿದೆ ಎಂದು ಅವರು ಹೇಳಿದರು.

ಮಾರ್ಚ್ ತಿಂಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದಾದ ಹಳ್ಳಿಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಬೋರವೆಲ್ ಗುರುತು ಮಾಡಿಕೊಳ್ಳುವುದಕ್ಕೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಹಾಗೆಯೇ ಟ್ಯಾಂಕರ್ ಸಮಸ್ಯೆ ಇದ್ದರೆ ಅವುಗಳಿಗೆ ಸೂಕ್ತ ಟೆಂಡರ್ ಕರೆದು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದರ ಜೊತೆಗೆ ತಕ್ಷಣವೇ ಹಳೆ ಬೋರವೆಲ್‌ನಲ್ಲಿ ಫ್ಲಷಿಂಗ್ ಮಾಡುವುದು, ಪೈಪ್‌ ಲೈನ್ ರಿಪೇರಿ, ಮೋಟಾರ್ ರಿಪೇರಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರ್, ನಗರಾಭಿವೃದ್ಧಿ ಕೋಶದ ಮೋತಿಲಾಲ್ ಲಮಾಣಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News