ಮಹಿಳೆಯರ ಸಬಲೀಕರಣವೇ ಸಮಾಜ ಪ್ರಗತಿಯ ಮೂಲ : ಸಚಿವ ಈಶ್ವರ್ ಖಂಡ್ರೆ
ಬೀದರ್ : ಮಹಿಳೆಯರ ಸಬಲೀಕರಣವೇ ಸಮಾಜದ ಪ್ರಗತಿಯ ಮೂಲವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅವರ ಸಹಯೋಗದಲ್ಲಿ ರವಿವಾರ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತೊಟ್ಟಿಲು ತೂಗುವ ಕೈ ದೇಶ ಆಳಬಲ್ಲದು ಎಂಬ ಮಾತಿನಂತೆ ಮಹಿಳೆಯರು ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಉಕ್ಕಿನ ಮಹಿಳೆ ಎಂದು ಖ್ಯಾತಿ ಪಡೆದ ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ದಿಟ್ಟ ಆಡಳಿತ ದೇಶದ ಇತಿಹಾಸದಲ್ಲಿ ಮಹತ್ವದ ಅಧ್ಯಾಯವಾಗಿದೆ ಎಂದರು.
ಕ್ರೀಡಾ ಕ್ಷೇತ್ರದಲ್ಲಿ ಪಿ.ಟಿ.ಉಷಾ, ಸೈನಾ ನೆಹ್ವಾಲ್ ಸೇರಿದಂತೆ ಅನೇಕ ಮಹಿಳಾ ಕ್ರೀಡಾಪಟುಗಳು ದೇಶಕ್ಕೆ ಕೀರ್ತಿ ತಂದುಕೊಟ್ಟಿದ್ದಾರೆ. ಅಂತರಿಕ್ಷ ಕ್ಷೇತ್ರದಲ್ಲಿ ಕಲ್ಪನಾ ಚಾವ್ಲಾ ಮತ್ತು ಸುನೀತಾ ವಿಲಿಯಮ್ಸ್ ಅವರು ಭಾರತದ ಹೆಸರನ್ನು ವಿಶ್ವದ ಮಟ್ಟದಲ್ಲಿ ಎತ್ತಿ ಹಿಡಿದಿದ್ದಾರೆ ಎಂದು ಅವರು ತಿಳಿಸಿದರು.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ತಿಂಗಳಿಗೆ 2 ಸಾವಿರ ರೂ. ಆರ್ಥಿಕ ನೆರವು ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ರಾಜ್ಯದ ಕೋಟ್ಯಂತರ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹಿಂ ಖಾನ್, ಮಹಾನಗರ ಪಾಲಿಕೆಯ ಮೇಯರ್ ಮಹಮ್ಮದ್ ಗೌಸ್, ಬುಡಾದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಬದೋಲೆ ಹಾಗೂ ಇತರ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ಅನೇಕ ಮಹಿಳೆಯರು ಉಪಸ್ಥಿತರಿದ್ದರು.