ರೈತರಿಗೆ ಬೀಜ-ರಸಗೊಬ್ಬರ ಕೊರತೆಯಾಗದಂತೆ ಕ್ರಮವಹಿಸಿ : ದಿಶಾ ಸಭೆಯಲ್ಲಿ ಅಧಿಕಾರಿಗಳಿಗೆ ಸಂಸದ ಸಾಗರ್ ಖಂಡ್ರೆ ಸೂಚನೆ
ಬೀದರ್: ಜಿಲ್ಲೆಯಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ಅಗತ್ಯ ಪ್ರಮಾಣದಲ್ಲಿ ಪೂರೈಕೆ ಮಾಡಲು ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ಸನ್ನದ್ಧವಾಗಬೇಕು ಎಂದು ಸಂಸದ ಸಾಗರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಶೇ.80ರಷ್ಟು ಬಿತ್ತನೆಯಾಗಿದ್ದು, ಮಳೆ ಮುಂದುವರಿದರೆ ಈ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದರು. ಸೋಯಾಬೀನ್, ಉದ್ದು, ಹೆಸರು ಹಾಗೂ ತೊಗರಿ ಬೆಳೆಗಳ ಬಿತ್ತನೆ ಪ್ರಗತಿಯಲ್ಲಿದ್ದು, ರೈತರು ಜು.31ರೊಳಗೆ ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ವಿದ್ಯುತ್ ವ್ಯತ್ಯಯ ಹಾಗೂ ಟ್ರಾನ್ಸ್‌ಫಾರ್ಮರ್‌ಗಳ ದುರಸ್ತಿ ವಿಳಂಬ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಶಾಶ್ವತ ಪರಿಹಾರ ರೂಪಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಅಪಾಯಕಾರಿ ವಿದ್ಯುತ್ ತಂತಿಗಳು ಹಾಗೂ ದುರಸ್ತಿಯಲ್ಲಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಬ್ರೀಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಕರ್ತವ್ಯ ಲೋಪ ಎಸಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಇಂತಹ ವೈದ್ಯರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಎಚ್ಚರಿಸಿದರು.
ರಾಷ್ಟ್ರೀಯ ಹೆದ್ದಾರಿಗಳ ಅಪಘಾತ ತಡೆಗೆ ಅಪಘಾತ ವಲಯಗಳನ್ನು ಗುರುತಿಸಿ ಬ್ಯಾರಿಕೇಡ್ ಹಾಗೂ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ಹೆಲ್ಮೆಟ್ ಹಾಗೂ ಸೀಟ್‌ಬೆಲ್ಟ್ ಕಡ್ಡಾಯ ಜಾರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ಮಳೆ ಕೊರತೆಯಿಂದ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಪರ್ಯಾಯ ಜಲಮೂಲಗಳನ್ನು ಗುರುತಿಸಿ, ನೀರಿನ ಗುಣಮಟ್ಟ ಪರಿಶೀಲಿಸಿ ನಿರಂತರ ಪೂರೈಕೆ ಖಚಿತಪಡಿಸಬೇಕು ಎಂದರು.
ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶ ಸುಧಾರಣೆಗೆ ಒತ್ತು ನೀಡಬೇಕು. ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಶುದ್ಧ ಕುಡಿಯುವ ನೀರು, ಗುಣಮಟ್ಟದ ಆಹಾರ, ಬೆಳಕು, ಶೌಚಾಲಯ ಹಾಗೂ ಸಿಸಿ ಕ್ಯಾಮೆರಾ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದರು.
ಲೋಕೋಪಯೋಗಿ ಇಲಾಖೆ ಕಡಿಮೆ ನೀರಿನಲ್ಲಿ ಕಟ್ಟಡ ನಿರ್ಮಾಣದ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಬೀದರ್ ರೈಲು ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಸ್ಲಂ ಬೋರ್ಡ್ ಮನೆಗಳ ಪ್ರಗತಿ ವರದಿ ಸಲ್ಲಿಸಬೇಕು. ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಬ್ಯಾಂಕ್‌ಗಳು ಸಾಲ ವಿತರಣೆಯಲ್ಲಿ ವಿಳಂಬ ಮಾಡಬಾರದು ಎಂದು ಸೂಚಿಸಿದರು.
ಮುಂದಿನ ದಿಶಾ ಸಮಿತಿ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯವಂತ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಯಂಪ್ರೇರಿತರಾಗಿ ರಕ್ತದಾನದಲ್ಲಿ ಭಾಗವಹಿಸಬೇಕು ಎಂದು ಸಂಸದ ಸಾಗರ್ ಖಂಡ್ರೆ ಕರೆ ನೀಡಿದರು.
ಸಭೆಯಲ್ಲಿ ರಾಜ್ಯ ಮಟ್ಟದ ದಿಶಾ ಸಮಿತಿ ಸದಸ್ಯ ಶಿವಯ್ಯಾ ಸ್ವಾಮಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.